ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವೈಮನಸ್ಸು ಉಂಟುಮಾಡುವ ಸಂದೇಶ ಪ್ರಸಾರ: ಬಂದ್ಗೆ ಕರೆ ನೀಡಿದ ಆರೋಪ : ಪ್ರಕರಣ ದಾಖಲು
ಪುತ್ತೂರು: ಧಾರ್ಮಿಕ ವೈಮನಸ್ಸು ಉಂಟುಮಾಡುವ ಹಾಗೂ ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಧಕ್ಕೆ ಉಂಟಾಗುವಂತಹ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿ ಬಂದ್ಗೆ ಕರೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ದರ್ಭೆ ಪ್ರದೇಶದ ಅಂಗಡಿಯೊಂದರಲ್ಲಿ ಇತ್ತೀಚೆಗೆ ನಡೆದ ಗಲಾಟೆಗೆ ಸಂಬಂಧಿಸಿದಂತೆ, ದಿನೇಶ್ ಪಂಜಿಗ ಎಂಬ ವಾಟ್ಸಾಪ್ ಖಾತೆ ಹೊಂದಿರುವ ವ್ಯಕ್ತಿಯು ಸಾಮಾಜಿಕ ಜಾಲತಾಣವಾದ ವಾಟ್ಸಾಪ್ ಮೂಲಕ ಧಾರ್ಮಿಕ ವೈಮನಸ್ಸು ಉಂಟುಮಾಡುವ ಹಾಗೂ ಸಾರ್ವಜನಿಕ ವಲಯದಲ್ಲಿ ಭಯದ ವಾತಾವರಣ ಸೃಷ್ಟಿಸುವಂತಹ ಸಂದೇಶವನ್ನು ಪ್ರಸಾರ ಮಾಡಿರುವುದಾಗಿ ಆರೋಪಿಸಲಾಗಿದೆ.
ಅಲ್ಲದೆ, ಸಂದೇಶದ ಮೂಲಕ ಬಂದ್ಗೆ ಕರೆ ನೀಡಿ, ಜನರು ಅಕ್ರಮಕೂಟ ಸೇರಿ ಕಾನೂನುಬಾಹಿರ ಕೃತ್ಯಗಳನ್ನು ಎಸಗಲು ದುಷ್ಪ್ರೇರಣೆ ನೀಡಿರುವುದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ದಿನೇಶ್ ಪಂಜಿಗ ಎಂಬ ವಾಟ್ಸಾಪ್ ಖಾತೆ ಹೊಂದಿರುವ ವ್ಯಕ್ತಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಕ್ರ. 100/2026, ಭಾರತೀಯ ನ್ಯಾಯ ಸಂಹಿತೆ (BNS), 2023ರ ಕಲಂ 353(2), 57 ಹಾಗೂ 189ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
