ಸಿಸಿಬಿ ಕಾರ್ಯಾಚರಣೆ: ಹಲವು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Spread the love

ಸಿಸಿಬಿ ಕಾರ್ಯಾಚರಣೆ: ಹಲವು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು: ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನ ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಫರಾಜ್ @ ಮೊಹಮ್ಮದ್ ಫರಾಜ್ (32), ದೇರಳಕಟ್ಟೆ ಸಮೀಪ ಮದನಿನಗರದ ಕೆ2 ಅಪಾರ್ಟ್‌ಮೆಂಟ್ ನಿವಾಸಿ ಎಂದು ಗುರುತಿಸಲಾಗಿದೆ.

ಆರೋಪಿಯ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದರೋಡೆ, ಕೊಲೆಯತ್ನ, ಮಾದಕ ವಸ್ತು ಮಾರಾಟ, ಕಳವು ಹಾಗೂ ಕಾರಾಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಪ್ರಕರಣಗಳು ಸೇರಿ ಒಟ್ಟು ಸುಮಾರು 10 ಪ್ರಕರಣಗಳು ದಾಖಲಾಗಿವೆ. ನ್ಯಾಯಾಲಯದಿಂದ ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ವಿಚಾರಣೆಗೆ ಹಾಜರಾಗದೆ ಈತ ತಲೆಮರೆಸಿಕೊಂಡಿದ್ದನು.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ, ದರೋಡೆ, ಹಲ್ಲೆ ಹಾಗೂ ಕಳವು ಸಂಬಂಧಿತ ನಾಲ್ಕು ಪ್ರಕರಣಗಳು, ಕೊಣಾಜೆ ಠಾಣೆಯಲ್ಲಿ ಹಲ್ಲೆ, ಬೆದರಿಕೆ ಮತ್ತು ಕಳವು ಸಂಬಂಧಿತ ಎರಡು ಪ್ರಕರಣಗಳು, ಉತ್ತರ ಠಾಣೆಯಲ್ಲಿ ಹಲ್ಲೆ, ಬೆದರಿಕೆ, ಅಪಹರಣ ಮತ್ತು ದರೋಡೆಗೆ ಸಂಬಂಧಿಸಿದ ಎರಡು ಪ್ರಕರಣಗಳು ದಾಖಲಾಗಿವೆ. ಬರ್ಕೆ ಠಾಣೆಯಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಯತ್ನ ನಡೆಸಿದ ಒಂದು ಪ್ರಕರಣ ಹಾಗೂ ಉರ್ವ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದ ಒಂದು ಪ್ರಕರಣ ದಾಖಲಾಗಿದೆ.

ಆರೋಪಿ ಉಳ್ಳಾಲ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದು, ಈತನ ವಿರುದ್ಧ ಪ್ರಸ್ತುತ ಆರು ವಾರಂಟ್‌ಗಳು ಹಾಗೂ ಒಂದು ಪ್ರೊಕ್ಲಮೇಶನ್ ಜಾರಿಯಲ್ಲಿದೆ. ಬಂಧಿತನನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಉರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಆರೋಪಿಯನ್ನು ಪತ್ತೆಹಚ್ಚುವ ಕಾರ್ಯಾಚರಣೆಯಲ್ಲಿ ಸಿಸಿಬಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.


Spread the love
Subscribe
Notify of

0 Comments
Inline Feedbacks
View all comments