ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಂಬಂಧಿಸಿ ಅ.12ರಂದು ಅಭಿಪ್ರಾಯ ಸಂಗ್ರಹ ಸಭೆ: ಐವನ್ ಡಿಸೋಜ

Spread the love

ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಂಬಂಧಿಸಿ ಅ.12ರಂದು ಅಭಿಪ್ರಾಯ ಸಂಗ್ರಹ ಸಭೆ: ಐವನ್ ಡಿಸೋಜ

ಮಂಗಳೂರು: ಮಂಗಳೂರಿನಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಕರಾವಳಿ ಸಂಚಾರಿ ಪೀಠ ಸ್ಥಾಪನೆಗೆ ಸಂಬಂಧಿಸಿ ಅಕ್ಟೋಬರ್ 12ರಂದು ಪೂರ್ವಾಹ್ನ 11:30ಕ್ಕೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕರ್ನಾಟಕ ಕರಾವಳಿ ಹೈಕೋರ್ಟ್ ಸಂಚಾರಿ ಪೀಠ ಹೋರಾಟ ಸಮಿತಿಯ ಸಂಚಾಲಕರೂ ಆಗಿರುವ ಐವನ್ ಡಿಸೋಜ ತಿಳಿಸಿದ್ದಾರೆ.

ಅವರು ಮಂಗಳೂರು ಮಹಾನಗರ ಪಾಲಿಕೆಯ ಕಟ್ಟಡದಲ್ಲಿರುವ ತಮ್ಮ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.

ಕರಾವಳಿಯ ಹೈಕೋರ್ಟ್ ಪೀಠ ಸ್ಥಾಪನೆಗೆ ಜನಾಭಿಪ್ರಾಯ ಸಂಗ್ರಹಿಸುವ ಸಲುವಾಗಿ ಅ.15 ರೊಳಗೆ ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಸೇರಿದಂತೆ ಜನಪ್ರತಿನಿಧಿಗಳು ಜನಾಭಿಪ್ರಾಯ ಸಂಗ್ರಹ ಸಭೆ ನಡೆಸಲಿದ್ದಾರೆ ಎಂದು ಹೇಳಿದರು.

ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು ಈಗಾಗಲೇ ನೇಮಕಗೊಳಿಸಿರುವ ಸಮಿತಿಯು ಅ.18ರ ಬಳಿಕ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಆಗಮಿಸಿ ಅಭಿಪ್ರಾಯ ಸಂಗ್ರಹಿಸಲಿದೆ. ಬಳಿಕ ಸಮಿತಿಯು ಮುಖ್ಯ ನ್ಯಾಯಮೂರ್ತಿಗಳಿಗೆ ವರದಿ ಸಲ್ಲಿಸಲಿದೆ ಎಂದರು.

ಹೈಕೋರ್ಟ್ನ ಸಂಚಾರಿ ಪೀಠವನ್ನು ಕರಾವಳಿಯಲ್ಲಿ ಸ್ಥಾಪಿಸುವ ವಿಚಾರದಲ್ಲಿ ರಾಜ್ಯ ಸರಕಾರದಿಂದ ಬೆಂಬಲ ವ್ಯಕ್ತವಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗದಿಂದ ಪಕ್ಷಾತೀತವಾಗಿ ಒಮ್ಮತಾಭಿಪ್ರಾಯ ಮೂಡಿಸಲು ಪ್ರಯತ್ನಿಸಲಾಗುತ್ತಿದೆ. ಈಗಾಗಲೇ ಸಂಸದರು, ಶಾಸಕರು ಕೂಡ ಪ್ರತ್ಯೇಕವಾಗಿ ಸಭೆ ನಡೆಸಿ ಒಮ್ಮತಾಭಿಪ್ರಾಯ ಕ್ರೋಢೀಕರಣ ಮಾಡುತ್ತಿದ್ದಾರೆ ಎಂದರು.

ದ.ಕ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿರುವ ವಕೀಲರ ಸಂಘಗಳಲ್ಲೂ ಸಭೆ ನಡೆಸಿ ಹೈಕೋರ್ಟ್ ಸಂಚಾರಿ ಪೀಠದ ಅನಿವಾರ್ಯತೆ ಬಗ್ಗೆ ಮನವರಿಕೆ ಮಾಡಲಾಗುವುದು ಎಂದು ಐವನ್ ಹೇಳಿದರು.

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಸಂಬಂಧಿಸಿ , ಸಕಾರಾತ್ಮಕ ಬೆಳವಣಿಗೆ ನಡೆದಿದೆ. ಇದೇ ವೇಳೆ ಅಲ್ಲೊಂದು ಇಲ್ಲೊಂದು ವಿರೋಧಗಳೂ ಕೇಳಿಬರುತ್ತಿವೆ. ಅದನ್ನು ಮೀರಿ ಕರಾವಳಿಯಲ್ಲಿ ಸಂಚಾರಿ ಪೀಠ ಸ್ಥಾಪಿಸಬೇಕಾಗಿದೆ. ಕರಾವಳಿಯ ಪ್ರಮುಖ ನಗರ ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಬೇಕಾದ ಎಲ್ಲ ರೀತಿಯ ಮೂಲಸೌಕರ್ಯಗಳು ಸಿದ್ಧವಾಗಿಯೇ ಇದೆ. ಇದನ್ನು ಕೂಡ ಹೈಕೋರ್ಟ್ ಕಮಿಟಿಗೆ ಮನವರಿಕೆ ಮಾಡಲಾಗುವುದು ಎಂದರು.

ಮಂಗಳೂರಿನಲ್ಲಿ ಹೈಕೋರ್ಟ್ನ ಸಂಚಾರಿ ಪೀಠ ರಚನೆಯಾದರೆ ಈ ಭಾಗದ ಕಾನೂನು ಪದವೀಧರರಿಗೆ ಹೆಚ್ಚು ಅನುಕೂಲವಾಗಲಿದೆ. ಈಗಾಗಲೇ ಮೆಡಿಕಲ್ ಕಾಲೇಜುಗಳಂತೆ ದ.ಕ. ಜಿಲ್ಲೆಯಲ್ಲಿ ಕಾನೂನು ಮಹಾವಿದ್ಯಾಲಯಗಳಿವೆ ಎಂದು ಹೇಳಿದರು.

ಹೋರಾಟ ಸಮಿತಿ ವಕ್ತಾರ ಎಂ.ಪಿ.ನೊರೋನ್ಹಾ, ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎಚ್.ವಿ.ರಾಘವೇಂದ್ರ, ಉಡುಪಿ ವಕೀಲರ ಸಂಘದ ಅಧ್ಯಕ್ಷ ರೊನಾಲ್ಡ್ ಪ್ರವೀಣ್, ಸದಸ್ಯಆದಿತ್ಯ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.


Spread the love
Subscribe
Notify of

0 Comments