ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಗಳ ಬಂಧನ
ಮಂಗಳೂರು: ನ್ಯಾಯಾಲಯಕ್ಕೆ ಸುಮಾರು ಐದು ವರ್ಷಗಳಿಂದ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳನ್ನು ಬರ್ಕೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಬಂಟ್ವಾಳ ತಾಲೂಕಿನ ನರಿಂಗಾಣ ಗ್ರಾಮದ ತೌಡಗೊಳಿ ಕ್ರಾಸ್ ನಿವಾಸಿ ಅಬ್ದುಲ್ ಖಾದರ್ ತನ್ಸಿಪ್ @ ತಂಜಿ ಹಾಗೂ ಮಂಗಳೂರಿನ ಅಡ್ಯಾರ ಕಣ್ಮರದ ಕುಂಡಾಲ್ ಹೌಸ್ ನಿವಾಸಿ ಮೊಹಮ್ಮದ್ ರಾಜೀಕ್ ಎಂದು ಗುರುತಿಸಲಾಗಿದೆ.
ಅಬ್ದುಲ್ ಖಾದರ್ ತನ್ಸಿಪ್ @ ತಂಜಿ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ 2021ರಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 18/2021ರ ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 143, 147, 148, 353, 332, 504 ಹಾಗೂ 149ರಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆಗೆ ಸಂಬಂಧಿಸಿ ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ಇರುವ ಹಿನ್ನೆಲೆಯಲ್ಲಿ ನ್ಯಾಯಾಲಯವು ಆರೋಪಿಯ ವಿರುದ್ಧ ವಾರಂಟ್ ಜಾರಿಗೊಳಿಸಿತ್ತು. ಈತನ ವಿರುದ್ಧ ಕೊಣಾಜೆ ಹಾಗೂ ಮಂಜೇಶ್ವರ ಪೊಲೀಸ್ ಠಾಣೆಗಳಲ್ಲಿಯೂ ಇತರ ಪ್ರಕರಣಗಳು ದಾಖಲಾಗಿವೆ.
ಇದೇ ರೀತಿ ಮೊಹಮ್ಮದ್ ರಾಜೀಕ್ ವಿರುದ್ಧ ಬರ್ಕೆ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 17/2021ರಲ್ಲಿ ಕಲಂ 143, 147, 148, 353, 332, 506, 307 ಹಾಗೂ 149ರಡಿ ಪ್ರಕರಣ ದಾಖಲಾಗಿದ್ದು, ಆತನು ಸಹ ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಆತನ ವಿರುದ್ಧ ವಾರಂಟ್ ಹೊರಡಿಸಿತ್ತು. ಈತನ ವಿರುದ್ಧ ಕಂಕನಾಡಿ, ಬೆಳ್ತಂಗಡಿ, ಪುತ್ತೂರು ಹಾಗೂ ಕದ್ರಿ ಪೊಲೀಸ್ ಠಾಣೆಗಳಲ್ಲಿಯೂ ವಿವಿಧ ಪ್ರಕರಣಗಳು ದಾಖಲಾಗಿವೆ.
ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿದ ಬರ್ಕೆ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಳಿಕ ನ್ಯಾಯಾಲಯವು ಇಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಿದೆ.
