ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿಗೆ ಶ್ಯಾಮಲಾ ಭಂಡಾರಿ ಆಯ್ಕೆ
ಕುಂದಾಪುರ: ಕರ್ನಾಟಕ ರಾಜ್ಯ ವಕೀಲರ ಪರಿಷತ್ (ಬೆಂಗಳೂರು) ಚುನಾವಣೆಯಲ್ಲಿ ಕುಂದಾಪುರದ ಹಿರಿಯ ವಕೀಲೆ ಶ್ಯಾಮಲಾ ಭಂಡಾರಿ ಅವರು ಜಯಗಳಿಸಿ ರಾಜ್ಯ ವಕೀಲರ ಪರಿಷತ್ತಿನ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಇತಿಹಾಸದಲ್ಲೇ ಮಹಿಳೆಯೊಬ್ಬರು ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿಗೆ ಚುನಾಯಿತರಾಗಿರುವುದು ಇದೇ ಮೊದಲ ಬಾರಿಯಾಗಿದೆ.
ಹಿರಿಯ ವಕೀಲೆಯಾಗಿರುವ ಶ್ಯಾಮಲಾ ಭಂಡಾರಿ ಅವರು ಸಾಮಾಜಿಕ ಹೋರಾಟಗಳ ಮೂಲಕ ಗುರುತಿಸಿಕೊಂಡಿದ್ದು, ಮಹಿಳಾ ಸಬಲೀಕರಣ, ಸಾಮಾಜಿಕ, ಶೈಕ್ಷಣಿಕ ಹಾಗೂ ಕಾನೂನು ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ್ದಾರೆ. ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅವರು ಸಾರ್ವಜನಿಕ ಜೀವನದಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.
ಪ್ರಸ್ತುತ ಅವರು ಕರ್ನಾಟಕ ರಾಜ್ಯ ನೋಟರಿ ವಕೀಲರ ಸಂಘದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.