ಗೃಹಲಕ್ಷ್ಮಿ: ತಾಂತ್ರಿಕ ದೋಷಗಳನ್ನು ಸರಿಪಡಿಸಲು ಗ್ಯಾರಂಟಿ ಜಿಲ್ಲಾಧ್ಯಕ್ಷರ ಸೂಚನೆ
ಮಂಗಳೂರು: ತಾಂತ್ರಿಕ ದೋಷದಿಂದಾಗಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಜೀವಂತವಾಗಿದ್ದರೂ ಮೃತ ಎಂದು ತೋರಿಸುವ ಸಮಸ್ಯೆಗಳಾಗುತ್ತಿದ್ದು, ಹಲವು ತಿಂಗಳಿನಿಂದ ಸಮಸ್ಯೆ ಬಗೆಹರಿದಿರುವುದಿಲ್ಲ. ಇಂತಹ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಸೂಚಿಸಿದ್ದಾರೆ.
ಅವರು ಬುಧವಾರ ದ.ಕ ಜಿಲ್ಲಾ ಪಂಚಾಯತ್ನಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮೃತಪಟ್ಟ ಫಲಾನುಭವಿಗಳ ನಿಖರ ಮಾಹಿತಿಗಳನ್ನು ಪರಿಶೀಲಿಸಿ, ಅವರ ಖಾತೆಗೆ ಜಮೆಯಾದ ಹಣವನ್ನು ಸರಕಾರಕ್ಕೆ ಮರು ಜಮೆ ಮಾಡಲು ಸೂಕ್ತ ಕ್ರಮವಹಿಸಬೇಕು. ಈ ನಿಟ್ಟಿನಲ್ಲಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತ್ವರಿತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಅಧ್ಯಕ್ಷರು ಸೂಚಿಸಿದರು.
ಗೃಹಲಕ್ಷ್ಮಿ ಯೋಜನೆಯಡಿ ಜೂನ್ 6 ರಿಂದ ಜುಲೈ 9 ರವರೆಗೆ 278 ಫಲಾನುಭವಿಗಳು ನೋಂದಾಯಿಸಿಕೊಂಡಿದ್ದು, ಒಟ್ಟು 3,82,922 ಫಲಾನುಭವಿಗಳಿರುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಶ್ರೀಧರ್ ಸಭೆಗೆ ಮಾಹಿತಿ ನೀಡಿದರು.
ಗೃಹಜ್ಯೋತಿ ಅರ್ಹ ಫಲಾನುಭವಿಗಳಿಗೆ ತಲುಪುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಈಗಾಗಲೇ ಗೃಹಜ್ಯೋತಿ ಮರು ಪರಿಶೀಲನಾ ಸಮೀಕ್ಷೆ ನಡೆಯುತ್ತಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಗೃಹಜ್ಯೋತಿ ಮಾಹಿತಿ ಸಂಗ್ರಹಕ್ಕೆ ನೆಟ್ವರ್ಕ್ ಸಮಸ್ಯೆ ಎದುರಾಗುತ್ತಿದ್ದು, ಮಾಹಿತಿ ಅಪ್ಡೇಟ್ ಮಾಡಲು ಕಷ್ಟವಾಗುತ್ತಿದೆ. ಆದ್ದರಿಂದ ಸ್ಥಳೀಯ ಗ್ರಾಮ ಪಂಚಾಯತ್ ಕಚೇರಿ ಸಭಾಂಗಣಗಳಲ್ಲಿ ಸಮೀಕ್ಷೆ ನಡೆಸಲು ಅವಕಾಶ ಒದಗಿಸಲು ಪಂಚಾಯತ್ಗಳಿಗೆ ಸೂಚಿಸಬೇಕು ಎಂದು ಅವರು ಹೇಳಿದರು.
ನೆಲ್ಯಾಡಿ ಬಸ್ ಸ್ಟ್ಯಾಂಡ್ಗೆ ಬಸ್ಸು ಹೋಗದೇ ಇದ್ದು, ಇದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ ಎಂಬ ವಿಷಯವನ್ನು ಕಡಬ ತಾಲೂಕು ಗ್ಯಾರಂಟಿ ಅಧ್ಯಕ್ಷರು ಪ್ರಸ್ತಾಪಿಸಿದಾಗ, ಈ ಬಗ್ಗೆ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಭರತ್ ಮುಂಡೋಡಿ ಸೂಚಿಸಿದರು.
ಪಡಿತರ ವಿತರಣೆ ಸಂದರ್ಭದಲ್ಲಿ ಆಹಾರ ನಿರೀಕ್ಷಕರು ನ್ಯಾಯ ಬೆಲೆ ಅಂಗಡಿಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿ ವರದಿ ನೀಡಲು ಎಲ್ಲಾ ಆಹಾರ ನಿರೀಕ್ಷಕರಿಗೆ ಸೂಚನೆ ನೀಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ ನೀಡುವ ಪಡಿತರ ಅಕ್ಕಿ ಅಕ್ರಮವಾಗಿ ಸಾಗಿಸುವುದು ಅಥವಾ ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.
ಯುವನಿಧಿಯಡಿ ಯೋಜನೆಯಡಿ 2 ವರ್ಷಗಳಿಂದ ಸಹಾಯಧನ ಪಡೆದ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶಗಳನ್ನು ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು. ಯುವನಿಧಿ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ 7,960 ನೋಂದಣಿಯಾಗಿದ್ದು, 7032 ಡಿ.ಬಿ.ಟಿ ಪಾವತಿಯಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಭಾರಿ, ಜಿಲ್ಲಾ ಪಂಚಾಯತ್ ಯೋಜನಾ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ಸುಷ್ಮಾ ಕೆ. ಎಸ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಜೋಕಿಂ ಡಿಸೋಜಾ, ನಾರಾಯಣ ನಾಯಕ್, ಸದಸ್ಯರಾದ ಆಲಿಸ್ಟನ್ ಕ್ಲೈವ್ ಡಿಕುನ್ಹಾ, ಅರುಣ್ ಕುಮಾರ್ ಶೆಟ್ಟಿ, ಆಲ್ವಿನ್ ಕ್ಲೆಮೆಂಟ್ ಕುಟಿನ್ಹ, ಜಯಂತಿ ಬಿಎ, ಶಾಹುಲ್ ಹಮೀದ್, ಉಮಾನಾಥ್ ಶೆಟ್ಟಿ, ಪದ್ಮನಾಭ ಸಾಲ್ಯಾನ್, ಸುಧೀರ್ ಕುಮಾರ್ ಶೆಟ್ಟಿ , ಎಸ್.ರಫೀಕ್, ರಂಜಿತ್ ರೈ, ಮತ್ತಿತರರು ಉಪಸ್ಥಿತರಿದ್ದರು.
