ಜ.7ರಂದು ದ.ಕ. ಜಿಲ್ಲೆಯಲ್ಲಿ ಮುಖ್ಯಮಂತ್ರಿ ಪ್ರವಾಸ: ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Spread the love

ಜ.7ರಂದು ದ.ಕ. ಜಿಲ್ಲೆಯಲ್ಲಿ ಮುಖ್ಯಮಂತ್ರಿ ಪ್ರವಾಸ: ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

ಮಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜನವರಿ 7ರಂದು ಜಿಲ್ಲೆಗೆ ಆಗಮಿಸಲಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

ಈ ಸಂಬಂಧ ಅರಣ್ಯ ಹಾಗು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅಧ್ಯಕ್ಷತೆಯಲ್ಲಿ ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಿದ್ಧತಾ ಸಭೆ ನಡೆಯಿತು. ಸಚಿವರು ಮಾತನಾಡಿ, ಮುಖ್ಯಮಂತ್ರಿಗಳ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಸಿದ್ಧತೆಗಳನ್ನು ತ್ವರಿತವಾಗಿ ನಡೆಸಲು ಸೂಚಿಸಿದರು.

ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ಮಾತನಾಡಿ, ಮುಖ್ಯಮಂತ್ರಿಗಳು ಜ.6ರಂದು ಮಂಗಳೂರಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಜ.7ರಂದು ಪುತ್ತೂರು, ಬೆಳ್ತಂಗಡಿ ಹಾಗೂ ಮೂಡಬಿದ್ರೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪುತ್ತೂರಿನಲ್ಲಿ 17 ಅಭಿವೃದ್ಧಿ ಕಾಮಗಾರಿ, ಬೆಳ್ತಂಗಡಿಯಲ್ಲಿ 11 ಹಾಗೂ ಮೂಡಬಿದ್ರೆಯಲ್ಲಿ 30 ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಒಟ್ಟು 180 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಚಾಲನೆ ದೊರೆಯಲಿದೆ. ಇದಲ್ಲದೇ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಕುಮಾರ್ ಮಾತನಾಡಿ, ಮುಖ್ಯಮಂತ್ರಿಗಳ ಪ್ರವಾಸ ಪ್ರಯುಕ್ತ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಸರಕಾರ ವಿವಿಧ ಯೋಜನೆಗಳ ಪ್ರಗತಿಯ ಮಾಹಿತಿ ಒಳಗೊಂಡ ತಾಲೂಕುವಾರು ಪುಸ್ತಕವನ್ನು ವಾರ್ತಾ ಇಲಾಖೆಯು ಹೊರತರಲಿದೆ ಎಂದು ತಿಳಿಸಿದರು.

ಸಭೆಯಲ್ಲಿ ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್. ರವಿ ಮತ್ತಿತರರು ಇದ್ದರು.


Spread the love