ದ.ಕ ಜಿಲ್ಲಾಡಳಿತದ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ
ಮಂಗಳೂರು: ಯಾವುದೇ ಧರ್ಮ, ಭಾಷೆ, ಪ್ರಾಂತ್ಯದವರಾಗಲಿ, ಕರ್ನಾಟಕದಲ್ಲಿ ಇರುವವರೆಲ್ಲರೂ ಕನ್ನಡಿಗರೇ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ನಗರದ ನೆಹರೂ ಮೈದಾನದಲ್ಲಿ ಶನಿವಾರ ಜಿಲ್ಲಾ ಮಟ್ಟದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ರಾಜ್ಯೋತ್ಸವ ಸಂದೇಶ ನೀಡಿದರು.
ನಾವು ನಮ್ಮ ಭಾಷೆಯನ್ನು ಯಾವುದೇ ಕಾರಣಕ್ಕೂ ಬಲಿ ಕೊಟ್ಟು ಉದಾರಿಗಳಾಗಬಾರದು. ಭಾಷೆಯ ವ್ಯಾಮೋಹವೂ ಅತಿಯಾಗಿರಬಾರದು, ಆದರೆ ಕನ್ನಡ ಅಭಿಮಾನ ಇರಲೇ ಬೇಕು, ಅಭಿಮಾನವಿದ್ದರೆ ಮಾತ್ರ ಕನ್ನಡ ಉಳಿಸಲು ಬೆಳೆಸಲು ಸಾಧ್ಯ. ಕನ್ನಡ ಭಾಷೆ ತಿಳಿಯದವರಿಗೆ ಕನ್ನಡ ಕಲಿಸುವ ಕೆಲಸವಾಗಬೇಕು ಎಂದು ಹೇಳಿದರು.
ನಗರ ವ್ಯಾಪ್ತಿಯಲ್ಲಿ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ತಲಪಾಡಿಯಿಂದ ಸುರತ್ಕಲ್ ವರೆಗೆ ರಿಂಗ್ ರೋಡ್ ನಿರ್ಮಿಸಲು ಸರಕಾರ ಯೋಜನೆ ರೂಪಿಸಲಿದೆ ಎಂದರು.
ಪಣಂಬೂರು ಮತ್ತು ತಣ್ಣೀರುಬಾವಿ ಕಡಲ ತೀರಗಳ ಅಭಿವೃದ್ಧಿ ಮತ್ತು ನಿರ್ವಹಣೆಗಾಗಿ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಯನ್ನು ಜಾರಿಗೊಳಿಸಲು ಕಾರ್ಯಾದೇಶ ನೀಡಲಾಗಿರುತ್ತದೆ. ವಿವಿಧ ಪ್ರವಾಸಿ ಕಾರ್ಯಕ್ರಮಗಳಿಗೆ ಅನುದಾನ ನೀಡುವ ಮೂಲಕ ಜಿಲ್ಲೆಗೆ ಪ್ರವಾಸಿಗರನ್ನು ಆಕರ್ಷಿಸಲು ಒತ್ತು ನೀಡಲಾಗುತ್ತಿದೆ.
ಮಂಗಳೂರಿನಲ್ಲಿ ಬಹುನಿರೀಕ್ಷಿತ ರಂಗಮಂದಿರ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದೆ. ಆ ಮೂಲಕ ಜಿಲ್ಲೆಯ ಸಾಹಿತ್ಯ ರಂಗಾಸಕ್ತರ ದೀರ್ಘಕಾಲದ ಬೇಡಿಕೆಗೆ ಸರಕಾರ ಸ್ಪಂದಿಸಿದೆ ಎಂದು ಅವರು ಹೇಳಿದರು.
ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರು, ವಿವಿಧ ಸಂಘ ಸಂಸ್ಥೆಗಳು ಸೇರಿ 95 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಮಂಜುನಾಥ್ ಭಂಡಾರಿ, ಐವನ್ ಡಿಸೋಜಾ, ವಿವಿಧ ಅಕಾಡೆಮಿ, ನಿಗಮ ಮಂಡಳಿ ಅಧ್ಯಕ್ಷರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.












