ದ.ಕ. ದಲ್ಲಿ ಶೇ. 95 ರಷ್ಟು ಗ್ಯಾರಂಟಿ ಫಲಾನುಭವಿಗಳು – ಭರತ್ ಮುಂಡೋಡಿ

Spread the love

ದ.ಕ. ದಲ್ಲಿ ಶೇ. 95 ರಷ್ಟು ಗ್ಯಾರಂಟಿ ಫಲಾನುಭವಿಗಳು – ಭರತ್ ಮುಂಡೋಡಿ

ಮಂಗಳೂರು: ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗಿದ್ದು, ಶೇಕಡಾ 95 ರಷ್ಟು ಮಂದಿ ಫಲಾನುಭವಿಗಳಾಗಿದ್ದಾರೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ತಿಳಿಸಿದ್ದಾರೆ.

ಅವರು ಗುರುವಾರ ಸುಳ್ಯ ಗಾಂಧಿನಗರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗ್ಯಾರಂಟಿ ಯೋಜನೆಗಳ ಅರಿವು ಮತ್ತು ಜಾಗೃತಿ ಮೂಡಿಸುವ ದ.ಕ ಜಿಲ್ಲಾ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಗ್ಯಾರಂಟಿ ಯೋಜನೆಗಳಿಗೆ ನೋಂದಣಿ ಕಾರ್ಯಕ್ರಮವು ಜಿಲ್ಲೆಯಲ್ಲಿ ಯೋಜನೆಯ ಆರಂಭದಲ್ಲಿಯೇ ಯಶಸ್ವಿಯಾಗಿ ನಡೆದಿದೆ. ಇದಲ್ಲದೆ ಎಲ್ಲಾ ಕಡೆ ಸಾರ್ವಜನಿಕರಿಗೆ ಗ್ಯಾರಂಟಿ ಯೋಜನೆ ನೋಂದಣಿಗೆ ಸಹಾಯವಾಗಲು ಶಿಬಿರಗಳನ್ನು ಏರ್ಪಡಿಸಲಾಗಿತ್ತು. ಇದರಿಂದ ಜಿಲ್ಲೆಯ ಬಹುತೇಕ ಜನರು ಒಂದಲ್ಲೊಂದು ಗ್ಯಾರಂಟಿ ಯೋಜನೆಯ ಫಲಾನುಭವಿಗಳಾಗಿದ್ದಾರೆ ಎಂದು ಅವರು ಹೇಳಿದರು.

ಸರ್ಕಾರದ ಯೋಜನೆಯು ಯಾವುದೇ ಮಧ್ಯವರ್ತಿಗಳ ನೆರವಿಲ್ಲದ ಜನರಿಗೆ ನೇರವಾಗಿ ತಲುಪುತ್ತಿರುವ ಒಂದು ದಾಖಲೆಯ ಕಾರ್ಯಕ್ರಮವಾಗಿದೆ. ಈ ಯಶಸ್ಸಿನಿಂದಾಗಿ ಹಲವಾರು ರಾಜ್ಯಗಳು ಕರ್ನಾಟಕದ ಮಾದರಿಯಲ್ಲಿ ಗ್ಯಾರಂಟಿ ಯೋಜನೆ ಜಾರಿಗೆ ತಂದಿದೆ ಎಂದು ಭರತ್ ಮುಂಡೋಡಿ ತಿಳಿಸಿದರು.

ಗ್ಯಾರಂಟಿ ಯೋಜನೆಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ, ಮಾಸಿಕ 2,000 ನೀಡುವ ಗೃಹಲಕ್ಷ್ಮಿ ಯೋಜನೆ, ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ಜಿಲ್ಲೆಯಲ್ಲಿ ಅತ್ಯಂತ ಯಶಸ್ವಿಯಾಗಿದೆ ಎಂದು ಹೇಳಿದರು.

ಸುಳ್ಯ ತಹಶೀಲ್ದಾರ್ ಮಂಜುಳಾ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಅವರು ಮಾತನಾಡಿದರು.

ಈ ಸಮಾರಂಭದಲ್ಲಿ ಕರ್ನಾಟಕ ಅರೆಭಾಷಾ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಸುಳ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಸ್ತಫಾ, ಸುಳ್ಯ ನಗರ ಪಂಚಾಯತ್ ಸದಸ್ಯರಾದ ಶರೀಫ್ ಕಂಠಿ, ರಿಯಾಜ್, ಜಿಲ್ಲಾ ಮತ್ತು ತಾಲೂಕು ಗ್ಯಾರಂಟಿ ಯೋಜನೆ ಸಮಿತಿ ಸದಸ್ಯರು ಇದ್ದರು.

ಜಿಲ್ಲಾ ವಾರ್ತಾಧಿಕಾರಿ ಬಿ.ಎ ಖಾದರ್ ಶಾ ಸ್ವಾಗತಿಸಿ, ಸುಳ್ಯ ತಾಲೂಕು ಗ್ಯಾರಂಟಿ ಅನುμÁ್ಠನ ಸಮಿತಿ ಅಧ್ಯಕ್ಷ ಹಮೀದ್ ಕುತ್ತಮೊಟ್ಟೆ ವಂದಿಸಿದರು.


Spread the love
Subscribe
Notify of

0 Comments
Inline Feedbacks
View all comments