ನಿರಂತರ ಮಳೆಗೆ ನಾಗುರಿಯಲ್ಲಿ ಮನೆ ಮೇಲ್ಛಾವಣಿ, ಗೋಡೆ ಕುಸಿದು ಮೂವರು ಮೃತ್ಯು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಂಗಳವಾರ ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆಗೆ ಮಂಗಳೂರು ನಗರದ ನಾಗುರಿಯಲ್ಲಿ ಭೀಕರ ದುರಂತ ಸಂಭವಿಸಿದೆ. ಇಲ್ಲಿನ ಹಳೆಯ ಹಂಚಿನ ಮನೆಯೊಂದರ ಮೇಲ್ಚಾವಣಿ ಹಾಗೂ ಗೋಡೆ ಬುಧವಾರ ಮುಂಜಾನೆ ದಿಢೀರನೆ ಕುಸಿದು ಬಿದ್ದ ಪರಿಣಾಮ, ಮನೆಯೊಳಗೆ ನಿದ್ದೆಯ ಮಂಪರಿನಲ್ಲಿದ್ದ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಒಬ್ಬ ಮಹಿಳೆ ಹಾಗೂ ಇಬ್ಬರು ಬಾಲಕಿಯರು ಎಂದು ಗುರುತಿಸಲಾಗಿದೆ.
ಮೃತರನ್ನು ಅನಾಮಿಕ ಚೌರಾಸಿಯ (8), ಪರಿ (4) ಮತ್ತು ಶಾಂತ (46) ಎಂದು ಗುರುತಿಸಲಾಗಿದೆ. ಅಲ್ಕಾ (14), ಅನುಷಾ (11) ಮತ್ತು ಬಾಲಕೃಷ್ಣ (48) ರಕ್ಷಣಾ ಕಾರ್ಯದಲ್ಲಿ ಬದುಕಿ ಉಳಿದವರು ಎಂದು ಗುರುತಿಸಲಾಗಿದೆ.
ಇವರು ಮೂಲತ ಬಿಹಾರ ರಾಜ್ಯದವರಾಗಿದ್ದು, ಪ್ರಸ್ತುತ ಕಂಕನಾಡಿ ಗ್ರಾಮದ, ಕಂಕನಾಡಿ ಪೊಲೀಸ್ ಠಾಣಾ ಹಿಂಬಾಗದಲ್ಲಿ ಕಳೆದ 20 ವರ್ಷಗಳಿಂದ ವಾಸ ಮಾಡಿಕೊಂಡಿರುತ್ತಾರೆ.
ಘಟನೆಯ ನಡೆದ ತಕ್ಷಣ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಮೇಲ್ಚಾವಣಿಯ ಅವಶೇಷಗಳ ಅಡಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಒಬ್ಬ ಪುರುಷ ಹಾಗೂ ಇಬ್ಬರು ಬಾಲಕಿಯರನ್ನು ಪ್ರಾಣಾಪಾಯದಿಂದ ರಕ್ಷಿಸಲಾಗಿದೆ. ಮಂಗಳವಾರ ರಾತ್ರಿಯಿಂದ ಸುರಿದ ಭಾರಿ ಮಳೆಯಿಂದಾಗಿ ಹಳೆಯದಾಗಿದ್ದ ಮನೆಯ ಗೋಡೆಗಳು ಸಂಪೂರ್ಣವಾಗಿ ತೇವಗೊಂಡು ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಭೇಟಿ ನೀಡಿ ಘಟನೆಯ ಮಾಹಿತಿ ಪಡೆದಿದ್ದಾರೆ
ಸಚಿವ ಖಾದರ್ ದೆಹಲಿ ಪ್ರವಾಸ ಮೊಟಕು
ನಗರದ ನಾಗೂರಿಯಲ್ಲಿ ಮನೆ ಕುಸಿದು ಮೂವರು ಸಾವನ್ನಪ್ಪಿದ ಘಟನೆಯ ಹಿನ್ನಲೆಯಲ್ಲಿ ದೆಹಲಿ ಪ್ರವಾಸದಲ್ಲಿರುವ ಆರೋಗ್ಯ ಸಚಿವ ಯು ಟಿ ಖಾದರ್ ಅವರು ತಮ್ಮ ಭೇಟಿಯನ್ನು ಮೊಟಕುಗೊಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿದ ಸಚಿವರು, ತ್ವರಿತ ಪರಿಹಾರ ಕ್ರಮಗಳಿಗೆ ಸೂಚಿಸಿದರು.
ಗಾಯಾಳುಗಳಿಗೆ ಸರಕಾರದ ವತಿಯಿಂದಲೇ ಆಸ್ಪತ್ರೆಯಲ್ಲಿ ಚಿಕಿತ್ಸಾ ವೆಚ್ಚ ಭರಿಸಲು ಹಾಗೂ ಮೃತರ ಕುಟುಂಬದವರಿಗೆ ಇಂದೇ ಪರಿಹಾರ ಮೊತ್ತ ನೀಡಲು ಅವರು ನಿರ್ದೇಶಿಸಿದ್ದಾರೆ.
ಸಚಿವರು ಇಂದು ಮಧ್ಯಾಹ್ನ ಮಂಗಳೂರು ತಲುಪಲಿದ್ದಾರೆ.
