ಪಾದಚಾರಿಗಳ ಸುರಕ್ಷತೆ, ಸುಗಮ ಸಂಚಾರಕ್ಕಾಗಿ ಮಂಗಳೂರು ನಗರ ಪೊಲೀಸರ ವಿಶೇಷ ಕಾರ್ಯಾಚರಣೆ
ಮಂಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವುದು, ಸಂಚಾರ ನಿಯಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸ್ ವತಿಯಿಂದ ವಿಶೇಷ ಸಂಚಾರ ಕಾರ್ಯಾಚರಣೆ ಮುಂದುವರಿದಿದೆ.

ಅದೇ ರೀತಿ, ನಕಲಿ ಹಾಗೂ ದೋಷಪೂರಿತ ನಂಬರ್ ಪ್ಲೇಟ್‌ಗಳನ್ನು ಬಳಸಿ ಸಂಚರಿಸುವುದನ್ನು ಹಾಗೂ ಇಂತಹ ವಾಹನಗಳನ್ನು ಅಪರಾಧ ಕೃತ್ಯಗಳಿಗೆ ಬಳಸುವುದನ್ನು ತಡೆಗಟ್ಟುವ ಉದ್ದೇಶದಿಂದ ಆ.4ರಿಂದ ಆ.12ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ.
ಈ ಕಾರ್ಯಾಚರಣೆಯಲ್ಲಿ ದೋಷಪೂರಿತ ನಂಬರ್ ಪ್ಲೇಟ್ ಹೊಂದಿದ್ದ 258 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಂಬರ್ ಪ್ಲೇಟ್ ಅಳವಡಿಸದೇ ಸಂಚರಿಸುತ್ತಿದ್ದ 74 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಒಟ್ಟು 332 ಪ್ರಕರಣಗಳನ್ನು ದಾಖಲಿಸಿ, ₹3,01,000 ದಂಡ ವಿಧಿಸಲಾಗಿದೆ.
ವಾಹನಗಳ ನಂಬರ್ ಪ್ಲೇಟ್‌ಗಳನ್ನು ಸ್ಪಷ್ಟವಾಗಿ, ನಿಯಮಾನುಸಾರ ಹಾಗೂ ನಿಗದಿತ ರೀತಿಯಲ್ಲಿ ಅಳವಡಿಸುವುದು ಪ್ರತಿಯೊಬ್ಬ ವಾಹನ ಮಾಲೀಕರ ಜವಾಬ್ದಾರಿಯಾಗಿದೆ. ವಾಹನಗಳಿಗೆ ನಿಗದಿಪಡಿಸಿರುವ HSRP ನಂಬರ್ ಪ್ಲೇಟ್‌ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ಪೊಲೀಸರು ಸೂಚಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ವತಿಯಿಂದ ಕೈಗೊಳ್ಳಲಾಗುತ್ತಿರುವ ಈ ವಿಶೇಷ ಸಂಚಾರ ಕಾರ್ಯಾಚರಣೆಗಳು ಮುಂದಿನ ದಿನಗಳಲ್ಲಿಯೂ ಮುಂದುವರಿಯಲಿದ್ದು, ಸಾರ್ವಜನಿಕರು ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸಿ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.