Home Mangalorean News Kannada News ಬೆಂಗಳೂರಿನ ನೂತನ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ

ಬೆಂಗಳೂರಿನ ನೂತನ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ

Spread the love

ಬೆಂಗಳೂರಿನ ನೂತನ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ

ಬೆಂಗಳೂರು : ಬೆಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದ್ದು, ಗುರುವಾರ ರಾತ್ರಿ ಅಧಿಕಾರ ಸ್ವೀಕರಿಸಿದ್ದಾರೆ.

ಜಾರ್ಖಂಡ್ ಮೂಲದವರಾದ ಸೀಮಂತ್ ಕುಮಾರ್ ಸಿಂಗ್ 1996ರ ಬ್ಯಾಚ್ ನ ಐಪಿಎಸ್ ಅಧಿಕಾರಿ. ಮಂಗಳೂರು ನಗರಕ್ಕೆ ಕಮಿಷನರೇಟ್ ಬಂದ ಬಳಿಕ ಮೊದಲ ಪೊಲೀಸ್ ಕಮಿಷನರ್ ಆಗಿದ್ದವರು ಸೀಮಂತ್ ಕುಮಾರ್ ಸಿಂಗ್. 2000ದಿಂದ 2004ರ ವರೆಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಆ ಬಳಿಕ 2014ರಲ್ಲಿ ಪಶ್ಚಿಮ ವಲಯದ ಐಜಿಪಿಯಾಗಿಯೂ ಕೆಲಸ ಮಾಡಿದ್ದಾರೆ.

ಬೆಂಗಳೂರು ಕೇಂದ್ರ ವಿಭಾಗದ ಐಜಿಪಿಯಾಗಿದ್ದ ಸೀಮಂತ್ ಕುಮಾರ್ ಸಿಂಗ್ ಅವರು ಡಿಐಜಿ ಮತ್ತು ನಕ್ಸಲ್ ನಿಗ್ರಹ ಪಡೆ (ANF)ನ ಕಮಾಂಡರ್ ಆಗಿಯೂ ಕೆಲಸ ಮಾಡಿದ್ದಾರೆ.

ಬೆಂಗಳೂರು ಮಹಾನಗರ ಕಾರ್ಯಪಡೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸೀಮಂತ್ ಕುಮಾರ್ ಸಿಂಗ್ ಅವರನ್ನು ಅಮಾನತಾದ ಬಿ.ದಯಾನಂದ್ ಅವರ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆ ವೇಳೆ ನಡೆದ ಭೀಕರ ಕಾಲ್ತುಳಿತದ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸೇರಿದಂತೆ ಹಲವು ಅಧಿಕಾರಿಗಳನ್ನು ಅಮಾನತು ಮಾಡಿತ್ತು.


Spread the love

Exit mobile version