ಭಾರೀ ಮಳೆಯ ಮುನ್ಸೂಚನೆ: ಎಚ್ಚರಿಕೆ ವಹಿಸಿಲು ಸಾರ್ವಜನಿಕರಿಗೆ ಉಡುಪಿ ಜಿಲ್ಲಾಡಳಿತ ಸೂಚನೆ
ಉಡುಪಿ: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಒಂದು ವಾರ (ಜೂ.11ರಿಂದ 17ರವರೆಗೆ)ಗುಡುಗು ಸಿಡಿಲಿನೊಂದಿಗೆ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗಲಿದೆ. ಅಲ್ಲದೇ ಸಮುದ್ರದ ಅಲೆಗಳ ಎತ್ತರವು ಹೆಚ್ಚಾಗಲಿರುವ ಸಾಧ್ಯತೆ ಇದೆ ಎಂದು ಉಡುಪಿ ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾದಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಕೆಲವು ಸೂಚನೆಗಳನ್ನು ನೀಡಿದೆ.
- ಸಾರ್ವಜನಿಕರು, ಮಕ್ಕಳು, ಕಾರ್ಮಿಕರು, ಮಳೆ,ಗಾಳಿ, ಸಿಡಿಲು ಇರುವ ಸಂದರ್ಭದಲ್ಲಿ ಹೊರಗೆ ತಿರುಗದೇ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯಬೇಕು. ಕೃಷಿಕರು, ಮಳೆ, ಸಿಡಿಲಿನ ಸಂದರ್ಭದಲ್ಲಿ ಕೃಷಿ ಚಟುವಟಿಕೆ ಗಳಿಂದ ದೂರವಿರಬೇಕು. ಅಲ್ಲದೇ ಸಾರ್ವಜನಿಕರು, ಪ್ರವಾಸಿಗರು, ಮೀನುಗಾರರು ನದಿ, ನೀರಿರುವ ಪ್ರದೇಶ ಹಾಗೂ ಸಮುದ್ರಕ್ಕೆ ಇಳಿಯದಂತೆ ಎಚ್ಚರ ವಹಿಸಬೇಕು.
- ಈ ಸಂದರ್ಭದಲ್ಲಿ ಮಕ್ಕಳು, ಸಾರ್ವಜನಿಕರು ಅಪಾಯಕಾರಿ ಮರ, ವಿದ್ಯುತ್ ಕಂಬದ ಬಳಿ ಸುಳಿಯಬಾರದು ಹಾಗೂ ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರಬೇಕು.
- ದುರ್ಬಲವಾದ, ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ ಹೋಗಬಾರದು. ಮರಗಳ ಕೆಳಗೆ ನಿಲ್ಲಬಾರದು. ಕಟ್ಟಡಗಳ ಮೇಲೆ ಅಪಾಯಕಾರಿ ಗೆಲ್ಲು, ರೆಂಬೆ, ಕೊಂಬೆಗಳಿದ್ದಲ್ಲಿ ಮೊದಲೇ ಅವುಗಳನ್ನು ಕಡಿದು ಕಟ್ಟಡಗಳನ್ನು ರಕ್ಷಿಸಿಕೊಳ್ಳಬೇಕು.
- ಈ ದಿನಗಳಲ್ಲಿ ಹೆಚ್ಚು ಮಳೆಯಾಗುವುದರಿಂದ ಕೆಲವು ಪ್ರದೇಶಗಳಲ್ಲಿ ಭೂಕುಸಿತವಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಇಂತಹ ಪ್ರದೇಶಗಳಲ್ಲಿ ವಾಸಿಸುವ ಸಾರ್ವಜನಿಕರು ತಹಶೀಲ್ದಾರರ ಕಚೇರಿ ಅಥವಾ ಗ್ರಾಮ ಪಂಚಾಯತ್ ಸಿಬ್ಬಂದಿಗಳನ್ನು ಸಂಪರ್ಕಿಸಿ ಹತ್ತಿರದ ಕಾಳಜಿ ಕೇಂದ್ರದಲ್ಲಿ ಉಳಿದುಕೊಳ್ಳಬಹುದಾಗಿದೆ.
- ಈ ದಿನಗಳಲ್ಲಿ ಸಿಡಿಲು ಹಾಗೂ ಭಾರೀ ಗಾಳಿಯೊಂದಿಗೆ ಮಳೆ ಬರುವುದರಿಂದ ಸಾರ್ವಜನಿಕರು ಹೊರಗೆ ತಿರುಗದೇ ಮನೆಗಳಲ್ಲಿಯೇ ಇರಬೇಕು. ದುರ್ಬಲ ಕಟ್ಟಡದಲ್ಲಿ ವಾಸವಿದ್ದಲ್ಲಿ ಅಥವಾ ಅಗತ್ಯವಿದ್ದಲ್ಲಿ ಮುಂಜಾಗೃತಾ ಕ್ರಮವಾಗಿ ಹತ್ತಿರದ ಕಾಳಜಿ ಕೇಂದ್ರದಲ್ಲಿ ಉಳಿಯಬಹುದು.
- ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು, ಸ್ಥಳೀಯ ಸಂಸ್ಥೆಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ವಿಪತ್ತನ್ನು ನಿಭಾಯಿಸಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ತುರ್ತುಕರೆಗಾಗಿ ಅಥವಾ ಹೆಚ್ಚಿನ ಮಾಹಿತಿಗಳಿಗಾಗಿ ಈ ಕೆಳಗಿನ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಮ್, ನಗರಸಭೆ ಅಥವಾ ತಾಲೂಕು ತಹಶೀಲ್ದಾರ್ ಕಚೇರಿಗೆ ಕರೆ ಮಾಡಬಹುದು.
ತುರ್ತುಸೇವೆಗೆ ಶುಲ್ಕರಹಿತ: 1077
ದೂರವಾಣಿ ಸಂಖ್ಯೆ 0820-2574802
ತಹಶೀಲ್ದಾರ್ ಕಚೇರಿ ಸಹಾಯವಾಣಿ ಸಂಖ್ಯೆ
ಉಡುಪಿ 0820-2520417
ಕುಂದಾಪುರ 08254-230357
ಕಾರ್ಕಳ 08258-230201
ಕಾಪು 0820-2551444
ಬ್ರಹ್ಮಾವರ 0820-2560494
ಬೈಂದೂರು 08254-251657
ಹೆಬ್ರಿ 08253-250201
ಉಡುಪಿ ನಗರಸಭೆ 0820-2593366, 0820-2520306