ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ | ಸಿಜೆ ಜೊತೆ ಚರ್ಚಿಸಿ ಪೀಠ ಸ್ಥಾಪನೆಗೆ ಪ್ರಾಮಾಣಿಕ ಪ್ರಯತ್ನ : ಸಿಎಂ ಭರವಸೆ
ಮಂಗಳೂರು: ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್ ಪೀಠ ಅತ್ಯವಶ್ಯಕತೆ ಇದೆ ಎಂಬ ವಿಚಾರ ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳ ಜೊತೆಯಲ್ಲಿ ಚರ್ಚಿಸಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ಕರಾವಳಿ ಭಾಗದ ವಕೀಲರ ನಿಯೋಗ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಹೈಕೋರ್ಟ್ ಪೀಠ ಹೋರಾಟ ಸಮಿತಿ ಸಂಚಾಲಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ ರವರು, ಕರಾವಳಿ ಭಾಗದ ಜನರಿಗೆ ಕ್ಷಿಪ್ರಗತಿಯಲ್ಲಿ ನ್ಯಾಯ ದೊರೆಯುವಂತಾಗಲು ಹೈಕೋರ್ಟ್ ಪೀಠ ಸ್ಥಾಪಿಸಬೇಕು ಎಂದು ಮನವಿ ಮಾಡಿದರು.
ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಯವರು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳ ಜೊತೆಯಲ್ಲಿ ಚರ್ಚೆ ನಡೆಸುವುದಾಗಿ ಭರವಸೆ ನೀಡಿದರು. ಅವರ ಜೊತೆಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಅವರು ಆಶ್ವಾಸನೆ ನೀಡಿದರು.
ಈ ಸಂದರ್ಭದಲ್ಲಿ ಮಂಗಳೂರು ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಎಚ್.ವಿ., ಪ್ರಧಾನ ಸರಕಾರಿ ಅಭಿಯೋಜಕರಾದ ಎಂಪಿ ನರೋನ್ಹ, ಟಿ.ಎನ್. ಪೂಜಾರಿ, ಎಂ ಆರ್ ಬಲ್ಲಾಳ್, ಎಂ ಯಶವಂತ ಮರೋಳಿ, ಮಂಗಳೂರು ವಕೀಲರ ಸಂಘದ ಉಪಾಧ್ಯಕ್ಷ ಸುಜಿತ್ ಕುಮಾರ್, ಪ್ರಧಾನ ಕಾರ್ಯದರ್ಶಿ ಶ್ರೀಧರ್ ಎಚ್, ಜೊತೆ ಕಾರ್ಯದರ್ಶಿ ಜ್ಯೋತಿ, ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್ ಡಿಕೋಸ್ಟ, ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಜಗನ್ನಾಥ ರೈ, ಮೂಡುಬಿದ್ರೆ ವಕೀಲರ ಸಂಘದ ಅಧ್ಯಕ್ಷ ಹರೀಶ್ ಕುಮಾರ್, ವಕೀಲರಾದ ಸುಮನಾ ಶರಣ್, ಶಾಲಿನಿ, ಹಾಗೂ ದಕ್ಷ ಕನ್ನಡ ಜಿಲ್ಲಾ ಹಾಗೂ ಕರಾವಳಿ ಭಾಗದ ವಕೀಲರ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
