ಮಂಗಳೂರು: ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಎಂ ಮಾನವ ಸರಪಳಿ
ಮಂಗಳೂರು: ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ ಸರಕಾರದ ಕ್ರಮವನ್ನು ಹಿಂಪಡೆಯಬೇಕು, ವೆನ್ಲಾಕ್ ಜಿಲ್ಲಾ ಆಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿ ಸಬೇಕು, ದ.ಕ. ಜಿಲ್ಲೆಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಹಾಗೂ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯ ಘಟಕಗಳನ್ನು ಸ್ಥಾಪಿಸಬೇಕು, ನಗರ ಆರೋಗ್ಯ ಕೇಂದ್ರಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಎಂದು ಆಗ್ರಹಿಸಿ ಸಿಪಿಎಂ ಮಂಗಳೂರು ನಗರ ಸಮಿತಿಯ ನೇತೃತ್ವದಲ್ಲಿ ಸೋಮವಾರ ನಗರದ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಎದುರು ಪ್ರತಿಭಟನೆ ಹಾಗೂ ಮಾನವ ಸರಪಳಿ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಪಿಎಂ ದ.ಕ. ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, ಆರೋಗ್ಯ ಕ್ಷೇತ್ರವನ್ನು ಖಾಸಗೀಕರಣಗೊಳಿಸುವುದು ಸಂವಿಧಾನ ನೀಡಿರುವ ಸಮಾನ ಆರೋಗ್ಯ ಹಕ್ಕಿಗೆ ಧಕ್ಕೆ ತರುವ ಕ್ರಮವಾಗಿದೆ. ಬಡವರು ಮತ್ತು ಮಧ್ಯಮ ವರ್ಗದ ಜನರು ಸರಕಾರಿ ಆಸ್ಪತ್ರೆಗಳನ್ನೇ ಅವಲಂಬಿಸಿದ್ದು, ಅವುಗಳನ್ನು ದುರ್ಬಲಗೊಳಿಸಿ ಖಾಸಗಿ ವಲಯಕ್ಕೆ ಒಪ್ಪಿಸುವ ನೀತಿಯನ್ನು ಸರಕಾರ ತಕ್ಷಣ ಕೈಬಿಡಬೇಕು ಎಂದು ಒತ್ತಾಯಿಸಿದರು.
ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಸುನೀಲ್ ಕುಮಾರ್ ಬಜಾಲ್ ಮಾತನಾಡಿ ದ.ಕ.ಜಿಲ್ಲೆಯ ಜನರು ಹೃದಯ ಹಾಗೂ ಕ್ಯಾನ್ಸರ್ ಚಿಕಿತ್ಸೆಗೆ ದೂರದ ನಗರಗಳಿಗೆ ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಜಯದೇವ ಮತ್ತು ಕಿದ್ವಾಯಿ ಆಸ್ಪತ್ರೆಗಳ ಘಟಕಗಳನ್ನು ಜಿಲ್ಲೆಯಲ್ಲಿ ಆರಂಭಿಸಿದರೆ ಸಾವಿರಾರು ರೋಗಿಗಳಿಗೆ ಅನುಕೂಲ ವಾಗಲಿದೆ. ವೆನ್ಲಾಕ್ ಆಸ್ಪತ್ರೆಯನ್ನು ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸುವ ಮೂಲಕ ಜಿಲ್ಲೆಯ ಜನರಿಗೆ ಗುಣಮಟ್ಟದ ಚಿಕಿತ್ಸೆ ಒದಗಿಸಬೇಕು ಎಂದು ಆಗ್ರಹಿಸಿದರು.
ಸಿಪಿಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು, ಡಿವೈಎಫ್‌ಐ ಮುಖಂಡರಾದ ಸಂತೋಷ್ ಬಜಾಲ್, ಬಿ.ಕೆ. ಇಮ್ತಿಯಾಝ್, ಪ್ರಮೀಳಾ ಶಕ್ತಿನಗರ ಮಾತನಾಡಿದರು.
ಪಕ್ಷದ ಜಿಲ್ಲಾ ಮುಖಂಡರಾದ ಜಯಂತಿ ಬಿ. ಶೆಟ್ಟಿ, ಬಾಲಕೃಷ್ಣ ಶೆಟ್ಟಿ. ಅಖಿಲ ಭಾರತ ವಕೀಲರ ಸಂಘದ ಜಿಲ್ಲಾ ಅಧ್ಯಕ್ಷ ಯಶವಂತ ಮರೋಳಿ ಉಪಸ್ಥಿತರಿದ್ದರು.
ಶಶಿಧರ ಶಕ್ತಿನಗರ, ಲೋಕೇಶ್ ಎಂ., ದೀಪಕ್ ಬಜಾಲ್, ದಿನೇಶ್ ಶೆಟ್ಟಿ, ಜಯಲಕ್ಷ್ಮಿ ಜಪ್ಪಿನಮೊಗರು, ತಯ್ಯೂಬ್ ಬೆಂಗರೆ, ನಾಗೇಶ್ ಕೋಟ್ಯಾನ್, ಶ್ರೀನಾಥ್ ಕಾಟಿಪಳ್ಳ, ಅಶೋಕ್ ಶ್ರೀಯಾನ್, ರವಿಚಂದ್ರ ಕೊಂಚಾಡಿ, ನವೀನ್ ಕೊಂಚಾಡಿ, ಕೃಷ್ಣ ತಣ್ಣೀರು ಬಾವಿ, ಆಶಾ ಬೋಳೂರು, ಬಿ.ಕೆ. ಮಕ್ಸೂದ್, ಉದಯಚಂದ್ರ ರೈ, ನೌಶಾದ್ ಬೆಂಗರೆ, ನಾಸಿರ್ ಬೆಂಗರೆ, ಜಗದೀಶ್ ಬಜಾಲ್, ಗೀತಾ ಜಲ್ಲಿಗುಡ್ಡೆ, ಜಯಪ್ರಕಾಶ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
