ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಬಂಧನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಡಿಜಿಟಲ್ ಅರೆಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ವಂಚನೆಗೆ ಬ್ಯಾಂಕ್ ಖಾತೆಗಳನ್ನು ಒದಗಿಸಿ ವಂಚನೆಯ ಹಣದ ವಹಿವಾಟಿಗೆ ಸಹಕರಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಕೊಳ್ನಾಡು ಕುಡ್ತಮುಗೇರು ನಿವಾಸಿ ಜುಬೈರ್ (32) ಎಂದು ಗುರುತಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯ ಅ.ಕ್ರ.104/2025ರಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ-2008ರ ಕಲಂ 66(C), 66(D) ಹಾಗೂ ಭಾರತೀಯ ನ್ಯಾಯ ಸಂಹಿತೆ (BNS)ಯ ಕಲಂ 126(2), 308(6), 318(4), 319(2) ಮತ್ತು 3(5)ರಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಜಿಲ್ಲಾ ಸೈಬರ್ ಅಪರಾಧ ಠಾಣೆಯ ಪೊಲೀಸರು ಜುಲೈ 3ರಂದು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ವಿಚಾರಣೆ ವೇಳೆ ಆರೋಪಿಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ.180/2022 ಸೇರಿದಂತೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ. ಅಲ್ಲದೆ, ಹಲವು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಹಾಗೂ ಬಂಧನದಿಂದ ತಪ್ಪಿಸಿಕೊಳ್ಳಲು ತಲೆಮರೆಸಿಕೊಂಡಿದ್ದ ವಿಚಾರವೂ ತನಿಖೆಯಲ್ಲಿ ತಿಳಿದುಬಂದಿದೆ.
