ಮಂತ್ರಾಲಯ ಬಳಿ ಭೀಕರ ಕಾರು ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ಜಿಎಂ ರವಿಶೆಟ್ಟಿ ದುರಂತ ಸಾವು, ಮೂವರಿಗೆ ಗಂಭೀರ ಗಾಯ
ಮಂಗಳೂರು : ಕರ್ನೂಲು ಜಿಲ್ಲೆಯ ಮಂತ್ರಾಲಯದ ಬಳಿ ಮಂಗಳವಾರ ನಸುಕಿನ ಜಾವ (ಜುಲೈ 21) ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಹಾಪ್ಕಾಮ್ಸ್ ಪ್ರಧಾನ ವ್ಯವಸ್ಥಾಪಕ (ಜಿಎಂ) ರವಿಶೆಟ್ಟಿ (43) ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಅವರ ಮೂವರು ಸ್ನೇಹಿತರು ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಗಳೂರಿನಿಂದ ರವಿಶೆಟ್ಟಿ ಅವರು ತಮ್ಮ ಸ್ನೇಹಿತರೊಂದಿಗೆ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಯ ದರ್ಶನಕ್ಕಾಗಿ ಕಾರಿನಲ್ಲಿ ತೆರಳುತ್ತಿದ್ದರು. ಮಂಗಳವಾರ ಮುಂಜಾನೆ ಮಂತ್ರಾಲಯ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು, ರಸ್ತೆ ಬದಿಯ ಕಲ್ವರ್ಟ್ (ಡಿವೈಡರ್) ಗೆ ರಭಸವಾಗಿ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಜ್ಜುಗುಜ್ಜಾಗಿದ್ದು, ತೀವ್ರ ರಕ್ತಸ್ರಾವದಿಂದ ರವಿಶೆಟ್ಟಿ ಅವರು ಘಟನಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಕಾರಿನಲ್ಲಿದ್ದ ಇತರ ಪ್ರಯಾಣಿಕರಾದ ಪ್ರದೀಪ್ ಆಳ್ವ, ಪುರುಷೋತ್ತಮ ಭಂಡಾರಿ ಹಾಗೂ ಸಿಎ ಸುಧೇಶ್ ರೈ ಎಂಬವರಿಗೆ ಗಂಭೀರ ಗಾಯಗಳಾಗಿವೆ.
ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ತಕ್ಷಣವೇ ಸ್ಪಂದಿಸಿ, ಗಾಯಾಳುಗಳನ್ನು ಕಾರಿನಿಂದ ಹೊರತೆಗೆದಿದ್ದಾರೆ.
ಗಾಯಗೊಂಡ ಮೂವರನ್ನು ಪ್ರಥಮ ಚಿಕಿತ್ಸೆಗಾಗಿ ಎಮ್ಮಿಗನೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.
ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಪೊಲೀಸರು ಅಪಘಾತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಕಾರು ಚಾಲಕನ ನಿಯಂತ್ರಣ ತಪ್ಪಲು ನಿಖರ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.













