ಮಾಜಿ ಕೇಂದ್ರ ಸಚಿವ, ಹಾಲಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನ
ಬೆಂಗಳೂರು : ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ (76) ಅವರು ರಾತ್ರಿ 1.20ಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬಹು ಅಂಗಾಂಗ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಅವರು ಮೂರು ದಿನಗಳ ಹಿಂದೆ ಬೆಂಗಳೂರಿನ ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಇವರಿಗೆ ಪತ್ನಿ ಹಾಗೂ ಮೂವರು ಹೆಣ್ಣು ಮಕ್ಕಳಿದ್ದಾರೆ.
ಹಲವು ದಿನಗಳಿಂದ ಪ್ರಸಾದ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ವೈದ್ಯ ಡಾ. ಸುದರ್ಶನ್ ಬಲ್ಲಾಳ್, ಪ್ರಸಾದ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದರು.
ಮೃತರ ಪಾರ್ಥಿವ ಶರೀರವನ್ನು ಬೆಳಗ್ಗೆ ಮೈಸೂರಿಗೆ ಕೊಂಡೊಯ್ದು, ಮೈಸೂರಿನ ವಸ್ತುಪ್ರದರ್ಶನ ಕೇಂದ್ರದಲ್ಲಿ ಸಾರ್ವಜನಿಕದ ದರ್ಶನಕ್ಕೆ ಇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಜನತಾ ಪರಿವಾರದಿಂದ ತಮ್ಮ ರಾಜಕೀಯ ಜೀವನವನ್ನು ಆರಂಭಿಸಿದ ವಿ.ಶ್ರೀನಿವಾಸ್ ಪ್ರಸಾದ್ ಅವರು, ಕೇಂದ್ರ ಹಾಗೂ ರಾಜ್ಯದಲ್ಲಿ ಸಚಿವರಾಗಿ ಅನನ್ಯ ಸೇವೆ ಸಲ್ಲಿಸಿದ್ದಾರೆ. ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಚುನಾವಣೆಗೆ ಸ್ಪರ್ಧಿಸಿ ವಿಧಾನಸಭೆ ಹಾಗೂ ಸಂಸತ್ ಗೆ ಆಯ್ಕೆಯಾಗಿದ್ದರು.
2019ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ ಯಾಗಿದ್ದ ವಿ. ಶ್ರೀನಿವಾಸ್ ಪ್ರಸಾದ್, ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಆರ್.ಧ್ರುವನಾರಾಯಣ್ ಅವರನ್ನು ಸೋಲಿಸಿ ಸಂಸದರಾಗಿ ಆಯ್ಕೆಯಾಗಿದ್ದರು. ಮೊನ್ನೆ ನಡೆದ 2024ರ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿ ಪ್ರಚಾರಕ್ಕೆ ತೆರಳದೆ ದೂರ ಉಳಿದಿದ್ದರು.
ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರನ್ನು ಭೇಟಿ ಮಾಡಿ ಅಚ್ಚರಿ ಮೂಡಿಸಿದ್ದರು. ಶ್ರೀಯುತರ ಅಂತಿಮ ಸಂಸ್ಕಾರ ಮೈಸೂರಿನಲ್ಲಿ ನೆರವೇರಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.