ಮುಡಿಪು: ಎಂಡಿಎಂಎ ಸಾಗಾಟ ಮಾಡುತ್ತಿದ್ದ ಆರೋಪಿ ಸೆರೆ
ಮಂಗಳೂರು: ನಿಷೇಧಿತ ಮಾದಕ ವಸ್ತು ಎಂಡಿಎಂಎಯನ್ನು ಮುಡಿಪು ಕಂಬಳ ಪದವು ಕೆಐಡಿಬಿ ರಸ್ತೆಯ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 12.05 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ.
ನಗರದ ಕಸಬಾ ಬೆಂಗ್ರೆ ಮೂಲದ, ಪ್ರಸಕ್ತ ಕೊಣಾಜೆ ಸಮೀಪದ ಅಸೈಗೊಳಿಯಲ್ಲಿ ವಾಸವಾಗಿದ್ದ ಅಬ್ದುಲ್ ಕಬೀರ್ ಯಾನೆ ಪಾರಿವಾಳ ಕಬೀರ್ (36) ಬಂಧಿತ ಆರೋಪಿಯಾಗಿದ್ದಾನೆ. ಈತನದಿಂದ 1.20 ಲಕ್ಷ ರೂ.ಮೌಲ್ಯದ 12.05 ಗ್ರಾಂ ತೂಕದ ಎಂಡಿಎಂಎ, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್, ಸ್ವೀಪ್ಟ್ ಕಾರು ಸಹಿತ ಒಟ್ಟು 4,31,250 ರೂ. ಮೌಲ್ಯದ ಸೊತ್ತು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು ಮತ್ತು ಮುಂಬೈಯಿಂದ ನಿಷೇಧಿತ ಮಾದಕ ವಸ್ತು ಎಂಡಿಎಂಎಯನ್ನು ತರಿಸಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮುಡಿಪು ಕಂಬಳ ಪದವು ಕೆಐಡಿಬಿ ರಸ್ತೆಯಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಗುರುವಾರ ದಾಳಿ ನಡೆಸಿ ಬಂಧಿಸಿದ್ದಾರೆ.
ಈತನ ವಿರುದ್ದ ಪಣಂಬೂರು, ಮಂಗಳೂರು ದಕ್ಷಿಣ, ಉತ್ತರ, ಪೂರ್ವ, ಕಂಕನಾಡಿ ನಗರ, ಉಳ್ಳಾಲ, ಬಜಪೆ ಹಾಗೂ ದ.ಕ. ಜಿಲ್ಲಾ ವ್ಯಾಪ್ತಿಯ ಉಪ್ಪಿನಂಗಡಿ ಪೊಲೀಸ್ ಠಾಣೆ, ಕೊಡಗು ಜಿಲ್ಲಾ ವ್ಯಾಪ್ತಿಯ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ಸಹಿತ 15ಕ್ಕೂ ಅಧಿಕ ಕಡೆ ದನ ಕಳವು ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.