ಯೋಗ ದಿನಾಚರಣೆ: ಅಚ್ಚುಕಟ್ಟಿನ ವ್ಯವಸ್ಥೆ ಮಾಡಲು ಎ.ಡಿ.ಸಿ ರಾಜು ಕೆ. ಸೂಚನೆ
ಮಂಗಳೂರು: ಯೋಗವು ದೇಹ ಮತ್ತು ಮನಸ್ಸಿನ ನಡುವಿನ ಸಮತೋಲನವನ್ನು ಕಾಪಾಡಲು ಸಹಾಯ ಮಾಡುತ್ತದೆ. ಆದ್ದರಿಂದ ಜೂನ್ 21 ರಂದು ನಡೆಯುವ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಸಂಬಂಧಿಸಿದ ಇಲಾಖೆಗಳು ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ಸಿದ್ಧತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ರಾಜು ಕೆ. ಸೂಚಿಸಿದ್ದಾರೆ.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರತೀ ವರ್ಷದಂತೆ ಈ ಬಾರಿಯೂ ಜಿಲ್ಲಾಡಳಿತ, ಆಯುಷ್ ಇಲಾಖೆ, ಆಯುಷ್ ಮಹಾವಿದ್ಯಾಲಯಗಳು, ವಿವಿಧ ಯೋಗ ಸಂಘಟನೆಗಳು, ಸ್ಕೌಟ್ಸ್ & ಗೈಡ್ಸ್, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದೊಂದಿಗೆ ಮಂಗಳೂರು ಪುರಭವನದ ಮಿನಿ ಸಭಾಂಗಣದಲ್ಲಿ ಆಚರಿಸಲಾಗುವ ಈ ಕಾರ್ಯಕ್ರಮದಲ್ಲಿ ಇಲಾಖಾ ಅಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಅವರು ಸೂಚಿಸಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಾರ್ವಜನಿಕರಿಗೆ ಕುಡಿಯುವ ನೀರು, ಸ್ವಚ್ಛತೆ, ತುರ್ತು ವೈದ್ಯಕೀಯ ನೆರವು, ಮತ್ತು ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆ ಮಾಡಲಾಗುತ್ತದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯುವಜನ ಸಂಘಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಬೇಕು.
ಈ ಸಂದರ್ಭದಲ್ಲಿ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
