ರಾಜ್ಯದ ಕಾಂಗ್ರೆಸ್ ಸರಕಾರ ಕಣ್ಣು ಕಿವಿ ಇಲ್ಲದಂತೆ ವರ್ತಿಸುತ್ತಿದೆ – ಯಶ್ಪಾಲ್ ಸುವರ್ಣ
ಉಡುಪಿ: ಜಿಲ್ಲೆಯಲ್ಲಿ ಹಲವಾರು ಸಮಸ್ಯೆಗಳು ತಾಂಡವವಾಡುತ್ತಿದ್ದರೂ ಕೂಡ ರಾಜ್ಯದ ಕಾಂಗ್ರೆಸ್ ಸರಕಾರ ಕಣ್ಣು ಕಿವಿ ಇಲ್ಲದಂತೆ ವರ್ತಿಸುತ್ತಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆರೋಪಿಸಿದರು.
ಅವರು ಸೋಮವಾರ ಭಾರತೀಯ ಜನತಾ ಪಾರ್ಟಿ, ಉಡುಪಿ ಜಿಲ್ಲೆ ವತಿಯಿಂದ ಉಡುಪಿ ಜಿಲ್ಲೆಯಲ್ಲಿ ಏಕ ವಿನ್ಯಾಸ ನಕ್ಷೆ (9&11) ಅವ್ಯವಸ್ಥೆಯ ಮೂಲಕ ಜನ ಸಾಮಾನ್ಯರಿಗೆ ಸಮಸ್ಯೆ ಸೃಷ್ಟಿಸಿರುವ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಸಭೆಯಲ್ಲಿ ರಾಜ್ಯ ಸರಕಾರದ ವೈಫಲ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.
ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 9/11, ಕೆಂಪುಕಲ್ಲು, ಮರಳು ಹಾಗೂ ಇನ್ನಿತರ ಹಲವಾರು ಸಮಸ್ಯೆಗಳು ತಾಂಡವವಾಡುತ್ತಿದೆ ಆದರೆ ಸರಕಾರ ಇದರ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ.
ಕಾಂಗ್ರೆಸ್ ನಾಯಕರು ದ್ವೇಷದ ರಾಜಕಾರಣ ಬಿಟ್ಟು ಜನರ ಕೆಲಸಕ್ಕೆ ಕೈಜೋಡಿಸುವ ಕಾರ್ಯ ಮಾಡಬೇಕು. ಕೂಡಲೇ ಏಕವಿನ್ಯಾಸ ನಕ್ಷೆಯ ಸಮಸ್ಯೆಯನ್ನು ಬಗೆಹರಿಸಬೇಕು. ಈ ಹಿಂದೆ 25 ಸೆಂಟ್ಸ್ ವರೆಗಿನ ಜಾಗಕ್ಕೆ ಏಕ ವಿನ್ಯಾಸ ನಕ್ಷೆ ನೀಡಲು ಅವಕಾಶವಿದ್ದು ಅದನ್ನೇ ಮುಂದುವರೆಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನಾ ಸಭೆಯ ಅಧ್ಯಕ್ಷತೆಯನ್ನು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರಾದ ನವೀನ್ ಶೆಟ್ಟಿ ಕುತ್ಯಾರು ವಹಿಸಿದ್ದರು. ಸಭೆಯಲ್ಲಿ ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಕಿಶೋರ್ ಕುಮಾರ್ ಬೊಟ್ಯಾಡಿ, ಉಡುಪಿ ನಗರ ಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಪಕ್ಷದ ಮುಖಂಡರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಉದಯ ಕುಮಾರ್ ಶೆಟ್ಟಿ ಕಿದಿಯೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷರಾದ ವಿಜಯ ಕೊಡವೂರು ಹಾಗೂ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.