ರಾಷ್ಟ್ರ ನಿರ್ಮಾಣದಲ್ಲಿ ಯುವಜನತೆ ಸಕ್ರಿಯರಾಗಲು ಭಾರತ್ ಜೋಡೋ ಯುವ ಸಂಘಗಳ ರಚನೆ: ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.

Spread the love

ರಾಷ್ಟ್ರ ನಿರ್ಮಾಣದಲ್ಲಿ ಯುವಜನತೆ ಸಕ್ರಿಯರಾಗಲು ಭಾರತ್ ಜೋಡೋ ಯುವ ಸಂಘಗಳ ರಚನೆ: ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.

ಮಂಗಳೂರು: ಯುವಜನರನ್ನು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಹಾಗೂ ರಾಷ್ಟ್ರ ನಿರ್ಮಾಣ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರೋತ್ಸಾಹಿಸುವ ಉದ್ದೇಶದಿಂದ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸುವ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರತಿ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆಗಳ ವಾರ್ಡ್ಗಳಲ್ಲಿ ಸಶಕ್ತ ಯುವ ಜನತೆಯನ್ನು ಒಂದುಗೂಡಿಸುವ ಉದ್ದೇಶದಿಂದ ಭಾರತ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲಾಗುತ್ತದೆ. ನಗರ ಮತ್ತು ಗ್ರಾಮಾಂತರ ವ್ಯಾಪ್ತಿಗಳಲ್ಲಿ ಯುವಜನರ ಸಕ್ರಿಯ ಭಾಗವಹಿಸುವಿಕೆಯನ್ನು ಖಚಿತಪಡಿಸಿ, ಸಂಘಗಳ ರಚನೆಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಭಾರತ ಜೋಡೋ ಕಾರ್ಯಕ್ರಮದ ಬಗ್ಗೆ ಜನಸಾಮಾನ್ಯರಲ್ಲಿ ಹಾಗೂ ಕಾಲೇಜುಗಳಲ್ಲಿ ಅರಿವು ಮೂಡಿಸಿ ಮತ್ತು ಪ್ರಚಾರ ಕೈಗೊಳ್ಳಲು ಕ್ರಮ ಕೈಗೊಂಡು ನೋಂದಣಿ ಹೆಚ್ಚಾಗುವಂತೆ ಅಗತ್ಯ ಕ್ರಮವಹಿಸಬೇಕು ಎಂದು ಅವರು ತಿಳಿಸಿದರು.

ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ ಮತ್ತು ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು ಭಾರತ್ ಜೋಡೋ ಯುವ ಸಂಘಗಳು ಪರಿಣಾಮಕಾರಿಯಾಗಿ ಸಕ್ರಿಯವಾಗಿ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನು ತಿಳಿದು ಜವಾಬ್ದಾರಿಯುತವಾಗಿ ಕೆಲಸ ನಿರ್ವಹಿಸಬೇಕಾಗಿ ಜಿಲ್ಲಾಧಿಕಾರಿಗಳು ಸೂಚಿಸಿದರು.

ಯೋಜನೆಯ ಯಶಸ್ವಿ ಅನುಷ್ಠಾನಕ್ಕಾಗಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹಾಗೂ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಮತ್ತು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಅವರಿಗೆ ಜವಾಬ್ದಾರಿ ನೀಡಲಾಗಿದೆ. ನಗರ ಪ್ರದೇಶಗಳಿಗೆ ನಗರಾಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕರು ಹಾಗೂ ಗ್ರಾಮೀಣ ಪ್ರದೇಶಗಳಿಗೆ ಜಿಲ್ಲಾ ಪಂಚಾಯಿತಿಯ ಉಪಕಾರ್ಯದರ್ಶಿಗಳನ್ನು ನೋಡಲ್ ಅಧಿಕಾರಿಗಳಾಗಿ ನೇಮಕ ಮಾಡಲಾಗಿದೆ ಎಂದು ಅವರು ವಿವರಿಸಿದರು.


Spread the love
Subscribe
Notify of

0 Comments