ರೆಡ್ ಅಲರ್ಟ್: ಉಡುಪಿ ಜಿಲ್ಲೆಯಲ್ಲಿ ಭಾರಿ ಗಾಳಿ-ಮಳೆ ಮುನ್ಸೂಚನೆ

Spread the love

ರೆಡ್ ಅಲರ್ಟ್: ಉಡುಪಿ ಜಿಲ್ಲೆಯಲ್ಲಿ ಭಾರಿ ಗಾಳಿ-ಮಳೆ ಮುನ್ಸೂಚನೆ

ಉಡುಪಿ: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 3 ದಿನಗಳ ಕಾಲ ( ಮೇ 20 ರಿಂದ 23 ವರೆಗೆ) ಜಿಲ್ಲೆಯ ಕೆಲವು ಭಾಗಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚಿಸಿದ್ದು, ಈ ಹಿನ್ನೆಲೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ.
ಕೃಷಿಕರು ಮಳೆ/ಸಿಡಿಲಿನಂತಹ ಸಂದರ್ಭದಲ್ಲಿ ಕೃಷಿ ಚಟುವಟಿಕೆಯಿಂದ ದೂರವಿರಬೇಕು. ಸಾರ್ವಜನಿಕರು, ಮಕ್ಕಳು, ಕಾರ್ಮಿಕರು ಸಿಡಿಲು ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯಬೇಕು ಮತ್ತು ಪ್ರವಾಸಿಗರು ಹಾಗೂ ಮೀನುಗಾರರು ನದಿ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು.

ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ಮರ ಮತ್ತು ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿAದ ದೂರವಿರಬೇಕು. ದುರ್ಬಲವಾದ ಅಥವಾ ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ ಮತ್ತು ಮರಗಳ ಕೆಳಗೆ ನಿಲ್ಲಬಾರದು. ಈ ಮೇಲ್ಕಂಡ ಎಲ್ಲಾ ಅಂಶಗಳನ್ನು ಗುಡುಗು, ಸಿಡಿಲು ಹಾಗೂ ಮಳೆ ಗಾಳಿಯಂತಹ ಸಂದರ್ಭಗಳಲ್ಲಿ ಚಾಚೂ ತಪ್ಪದೇ ಕಡ್ಡಾಯವಾಗಿ ಪಾಲಿಸಬೇಕು.

ಸಾರ್ವಜನಿಕರು ಅಗತ್ಯವಿದ್ದಲ್ಲಿ ಮುಂಜಾಗೃತ ಕ್ರಮವಾಗಿ ಹತ್ತಿರದ ಕಾಳಜಿ ಕೇಂದ್ರದಲ್ಲಿ ಉಳಿಯಬಹುದು. ಹೆಚ್ಚಿನ ಮಾಹಿತಿಗಾಗಿ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂ ಶುಲ್ಕ ರಹಿತ 1077, ದೂರವಾಣಿ ಸಂಖ್ಯೆ: 0820-2574802 ಅಥವಾ ಆಯಾ ತಾಲೂಕಾ ತಹಶೀಲ್ದಾರರ ಕಛೇರಿಗೆ ಕರೆ ಮಾಡಬಹುದಾಗಿದೆ.

ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತನ್ನು ನಿಭಾಯಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments