ರೆಡ್ ಅಲರ್ಟ್ ಹಿನ್ನೆಲೆ: ಜು. 8ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜುಲೈ 8 (ಬುಧವಾರ) ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ವಸತಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿವರೆಗೆ) ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಈ ಕುರಿತು ಆದೇಶ ಹೊರಡಿಸಿದ್ದು, ರಜೆ ಘೋಷಿಸಿರುವ ದಿನ ಯಾವುದೇ ತರಗತಿಗಳನ್ನು ನಡೆಸದಂತೆ ಸೂಚಿಸಲಾಗಿದೆ. ಆದೇಶವನ್ನು ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005ರ ಕಲಂ 51(ಬಿ) ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಭಾರೀ ಮಳೆಯ ಹಿನ್ನೆಲೆ ಪಾಲಕರು ಮಕ್ಕಳನ್ನು ನೀರು ತುಂಬಿರುವ ತಗ್ಗು ಪ್ರದೇಶಗಳು, ಕೆರೆ, ನದಿ ಹಾಗೂ ಸಮುದ್ರ ತೀರಗಳಿಗೆ ತೆರಳದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಇದೇ ವೇಳೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದ್ದು, ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ ಮತ್ತು ಸಮುದ್ರ ತೀರಗಳಿಗೆ ತೆರಳದಂತೆ ಸಲಹೆ ನೀಡಲಾಗಿದೆ.
ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳಬೇಕು. ಸಾರ್ವಜನಿಕರಿಂದ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸುವುದರೊಂದಿಗೆ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಲು ಸೂಚಿಸಲಾಗಿದೆ.
ಅದೇ ರೀತಿ, ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಪ್ರತಿಯೊಂದು ತಾಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯುವ ಮೂಲಕ ಅಗತ್ಯ ಸನ್ನದ್ಧತೆ ವಹಿಸಬೇಕು ಎಂದು ನಿರ್ದೇಶಿಸಲಾಗಿದೆ.
ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರು ಜಿಲ್ಲಾಡಳಿತದ ನಿಯಂತ್ರಣ ಕೊಠಡಿ ಅಥವಾ ಸಂಬಂಧಿತ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.













