ವಿಟ್ಲ : ಲಂಚ ಸ್ವೀಕರಿಸುತ್ತಿದ್ದ ಆರೋಪ; ಪೆರುವಾಯಿ ಗ್ರಾ.ಪಂ. ಅಧ್ಯಕ್ಷೆ, ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

Spread the love

ವಿಟ್ಲ : ಲಂಚ ಸ್ವೀಕರಿಸುತ್ತಿದ್ದ ಆರೋಪ; ಪೆರುವಾಯಿ ಗ್ರಾ.ಪಂ. ಅಧ್ಯಕ್ಷೆ, ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ವಿಟ್ಲ : ಲಂಚ ಸ್ವೀಕರಿಸುತ್ತಿದ್ದ ಆರೋಪದಲ್ಲಿ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮತ್ತು ಬಿಲ್ ಕಲೆಕ್ಟರ್‌ ಅವರು ಮಂಗಳೂರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶನಿವಾರ ಸಂಜೆ ನಡೆದಿದೆ.

ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫಿಸಾ, ಬಿಲ್ ಕಲೆಕ್ಟರ್ ವಿಲಿಯಂ ಎಂಬವರನ್ನು ಮಂಗಳೂರು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ದೂರುದಾರರ ಮಾವನಿಗೆ ಪೆರುವಾಯಿ ಗ್ರಾಮದಲ್ಲಿ 1 ಎಕ್ರೆ ಕೃಷಿ ಜಮೀನು ಇದ್ದು, ನೀರಿನ ವ್ಯವಸ್ಥೆ ಇಲ್ಲದೇ ಇರುವುದರಿಂದ ಪೆರುವಾಯಿ ಗ್ರಾಮ ಪಂಚಾಯತ್‌ಗೆ ಸರ್ಕಾರದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿಯಲ್ಲಿ ಕೊಳವೆ ಬಾವಿಯನ್ನು ಮಾಡಿಕೊಡಲು 2024 ರಲ್ಲಿ ಪಿಡಿಒ, ಪೆರುವಾಯಿ ಗ್ರಾಮ ಪಂಚಾಯತ್‌ ಗೆ ಅರ್ಜಿ ಸಲ್ಲಿಸಿರುತ್ತಾರೆ. 2024ನೇ ಸಾಲಿನಲ್ಲಿ ಪೆರುವಾಯಿ ಗ್ರಾಮ ಪಂಚಾಯತ್ ಅವರನ್ನು ಕೊಳವೆ ಬಾವಿ ಲಿಸ್ಟ್‌ನಲ್ಲಿ ಸೇರಿಸಿರುವುದಿಲ್ಲ. ನಂತರ 2025ನೇ ಇಸವಿಯಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಸರ್ಕಾರವು ಕೃಷಿಕರಿಗೆ ಕೊಳವೆ ಬಾವಿ ಮಾಡಿಕೊಡುತ್ತಿರುವ ಕುರಿತು ತಿಳಿದು ಬಂದಾಗ, ಪಿರ್ಯಾದಿದಾರರ ಮಾವನವರು ಪುನಃ ಮೇ 2025ರಲ್ಲಿ ಕೊಳವೆ ಬಾವಿಗೆ ಅರ್ಜಿಯನ್ನು ಸಲ್ಲಿಸಿರುತ್ತಾರೆ.

ನಂತರ ಅವರ ಪತ್ನಿ ಪೆರುವಾಯಿ ಗ್ರಾಮ ಪಂಚಾಯತ್ ಕಚೇರಿಗೆ ಎರಡು ಮೂರು ಬಾರಿ ಹೋಗಿ ವಿಚಾರಿಸಿದರೂ ಸರಿಯಾಗಿ ಪ್ರತಿಕ್ರಿಯೆ ನೀಡಿರುವುದಿಲ್ಲ. ದೂರುದಾರರ ಮಾವನಿಗೆ ಸುಮಾರು 75 ವರ್ಷ ವಯಸ್ಸಾಗಿದ್ದು, ಅವರಿಗೆ ಅಸೌಖ್ಯ ಇದ್ದುದರಿಂದ ದೂರುದಾರ ಕೊಳವೆ ಬಾವಿ ಬಗ್ಗೆ ಪಂಚಾಯತ್‌ಗೆ ಹೋಗಿ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ನೆಫಿಸಾ ಅವರಲ್ಲಿ ತನ್ನ ಮಾವನ ಹೆಸರಿಗೆ ಕೊಳವೆ ಬಾವಿ ಮಂಜೂರು ಆಗಿದೆಯೇ ಎಂಬ ಬಗ್ಗೆ ವಿಚಾರಿಸಿದಾಗ ‘ನಿಮಗೆ ಬೋರ್‌ವೆಲ್ ಫ್ರೀ ಆಗುತ್ತದೆ, ಬೆಂಗಳೂರು ಆಫೀಸ್‌ಗೆ ಹತ್ತು ಸಾವಿರ ಕೊಡ್ಲಿಕ್ಕೆ ಇದೆ, ಹಣ ಕೊಟ್ಟರೆ ಅವರು ಪಾಸ್ ಮಾಡುತ್ತಾರೆ, ತಾನು ಬೆಂಗಳೂರಿಗೆ ಹೋಗಿ ನಿಮ್ಮ ಕೆಲಸ ಮಾಡಿಸುತ್ತೇನೆ, ಹಣ ತಗೊಂಡು ಬನ್ನಿ, ನೀವು ಹಣ ಕೊಟ್ಟರೆ ಮಾತ್ರ ನಿಮಗೆ ಬೋರ್‌ವೆಲ್ ಪಾಸ್ ಮಾಡಿಸಿ ಕೊಡುತ್ತೇನೆ’ ಎಂದು ಹೇಳಿರುವುದಾಗಿ ದೂರಲಾಗಿದೆ. ಈ ವೇಳೆ ಅವರು ತನ್ನಲ್ಲಿ ಅಷ್ಟು ಹಣ ಇಲ್ಲ ಎಂದು ಹೇಳಿ ವಾಪಾಸು ಬಂದಿರುತ್ತಾರೆ.

ನಂತರ ಸೆ.4 ರಂದು ವಾಪಾಸ್ಸು ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ನೆಫಿಸಾರಲ್ಲಿ ಬೋರ್‌ವೆಲ್ ಹಾಕಿಸಿ ಕೊಡಲು ಕೇಳಿಕೊಂಡಾಗ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ನೆಫಿಸಾ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿಯಲ್ಲಿ ಬೋರ್‌ವೆಲ್ ಹಾಕಿಸಿ ಕೊಡಲು ರೂ 10,000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ನಫಿಸಾ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ.

ಸೆ.6 ರಂದು ನಫೀಸಾ ಅವರು ಬಿಲ್ ಕಲೆಕ್ಟರ್ ವಿಲಿಯಂ ಎಂಬಾತನಿಗೆ 10,000 ರೂ. ಲಂಚದ ಹಣವನ್ನು ಪಡೆದು ಕೊಳ್ಳಲು ಸೂಚಿಸಿದಂತೆ 10,000 ರೂ. ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುತ್ತಾರೆ.

ಮಂಗಳೂರು ಲೋಕಾಯುಕ್ತ ಎಸ್ಪಿ (ಪ್ರಭಾರ) ಕುಮಾರ್ ಚಂದ್ರ ನೇತೃತ್ವದಲ್ಲಿ ಡಿವೈಎಸ್ಪಿ ಡಾ.ಗಾನ.ಪಿ. ಕುಮಾರ್, ಸುರೇಶ್ ಕುಮಾರ್ ಪಿ, ಇನ್ಸ್ಪೆಕ್ಟರ್ ಭಾರತಿ, ಚಂದ್ರಶೇಖರ್ ಕೆ.ಎನ್, ರವಿ ಪವಾರ್, ಸಿಬ್ಬಂದಿ ಮಹೇಶ್, ರಾಜಪ್ಪ, ರಾಧಕೃಷ್ಣ, ಆದರ್ಶ್, ರಾಮ ನಾಯ್ಕ, ವಿವೇಕ್, ಪ್ರವೀಣ್,ಗಂಗಣ್ಣ, ನಾಗಪ್ಪ,ಮಾಹದೇವ, ಪವಿತ್ರ, ದುಂಡಪ್ಪ, ರುದ್ರಗೌಡ,ರಾಜಶೇಖರ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments