ಸಂವಿಧಾನವನ್ನು ಓದಿ ಉತ್ತಮ ನಾಯಕತ್ವ ಗುಣ ಬೆಳೆಸಿಕೊಳ್ಳಿ- ಸ್ಪೀಕರ್ ಯು.ಟಿ ಖಾದರ್ ಕರೆ

Spread the love

ಸಂವಿಧಾನವನ್ನು ಓದಿ ಉತ್ತಮ ನಾಯಕತ್ವ ಗುಣ ಬೆಳೆಸಿಕೊಳ್ಳಿ- ಸ್ಪೀಕರ್ ಯು.ಟಿ ಖಾದರ್ ಕರೆ

ಮಂಗಳೂರು:  ಇತಿಹಾಸವನ್ನು ತಿಳಿದುಕೊಂಡವರು ಮಾತ್ರ ಇತಿಹಾಸವನ್ನು ಸೃಷ್ಟಿಸಬಲ್ಲರು ಎಂಬ ಅಂಬೇಡ್ಕರ್ ಅವರ ಮಾತಿನಂತೆ ಭವಿಷ್ಯದ ಮುಂದಿನ ದಿನಗಳಲ್ಲಿ ಇತಿಹಾಸವನ್ನು ಸೃಷ್ಟಿಸುವ ವ್ಯಕ್ತಿತ್ವವನ್ನು ಇಂದಿನ ಯುವಜನತೆ ರೂಪಿಸಿಕೊಳ್ಳಬೇಕು. ಸಂವಿಧಾನವನ್ನು ಅರ್ಥೈಸಿಕೊಂಡು ನಮ್ಮ ದೇಶಕ್ಕೆ ಮತ್ತು ಸಮಾಜಕ್ಕೆ ಪೂರಕವಾಗುವಂತ ಕೆಲಸವನ್ನು ಮಾಡುವ ಜವಾಬ್ದಾರಿ ನಮ್ಮದು ಎಂದು ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಹೇಳಿದರು.

ಅವರು ಬುಧವಾರ ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಡಾ. ಬಿ. ಆರ್. ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧೀಜಿಯವರ ಪುಸ್ತಕಗಳನ್ನು ಹಾಗೂ ಸಂವಿಧಾನವನ್ನು ಅರ್ಥೈಸಿಕೊಳ್ಳಬೇಕು. ಸಂವಿಧಾನದಲ್ಲಿ ಬರೆದ ಪ್ರತಿಯೊಂದು ಚಿಂತನೆಗಳು ಅರ್ಥಪೂರ್ಣವಾಗಿದ್ದು, ಸಂವಿಧಾನವನ್ನು ಓದಿ ಉತ್ತಮ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು ಎಂದು ಅವರು ಹೇಳಿದರು. ಸಂವಿಧಾನಕ್ಕನುಗುಣವಾಗಿ ಕೆಲಸ ನಿರ್ವಹಿಸಿದಾಗ ಮಾತ್ರ ನಮ್ಮ ದೇಶ ಬಲಿಷ್ಠ ದೇಶವಾಗುತ್ತದೆ ಎಂದರು.

ದೇಶದ ಅತ್ಯಂತ ಕಟ್ಟ ಕಡೆಯ ವ್ಯಕ್ತಿ ಕೂಡ ಇಂದು ಕಾಶ್ಮೀರದಿಂದ ಕನ್ಯಾಕುಮಾರಿಯ ವರೆಗೆ ನಿರ್ಭಯದಿ ಓಡಾಡಲು ಅಂಬೇಡ್ಕರ್ ಅವರ ರಚಿಸಿದ ಸಂವಿಧಾನವೇ ಕಾರಣ. ಭಾರತ ದೇಶದ ಪ್ರಜೆಗಳಾದ ನಾವು ಸಂವಿಧಾನಕ್ಕೆ ಬದ್ಧರಾಗಿರಬೇಕು. ಸಂವಿಧಾನದ ವಿರುದ್ಧವಾಗಿ ನಡೆದವರಿಗೆ ಮನವರಿಕೆ ಮಾಡಿ ಅವರನ್ನು ಸತ್ಪ್ರಜೆಗಳನ್ನಾಗಿಸುವುದು ಅಗತ್ಯವಾಗಿದೆ. ದೇಶದ ಪ್ರತಿಯೊಬ್ಬ ನಾಗರಿಕನು ಸಂವಿಧಾನವನ್ನು ಓದಿ ಅದರ ಬಗ್ಗೆ ಅರಿವು ಹೊಂದಬೇಕು ಎಂದು ಸ್ಪೀಕರ್ ಹೇಳಿದರು.

ಉಪನ್ಯಾಸ ನೀಡಿದ ಗೋಕರ್ಣನಾಥ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಘುರಾಜ್ ಕದ್ರಿ ಮಾತನಾಡಿ, ಡಾ. ಬಿ.ಆರ್ ಅಂಬೇಡ್ಕರ್ ದೇಶಕ್ಕೆ ಜನರಿಗೆ ಪ್ರತಿಯೊಂದು ವರ್ಗಕ್ಕೆ ವಿಶೇಷವಾದ ಕೊಡುಗೆಯನ್ನು ನೀಡಿದ್ದಾರೆ. ಸಂವಿಧಾನವು ಸಮಾಜದ ಭಯವನ್ನು ನಿವಾರಿಸಲು ಸೃಷ್ಟಿಯಾದ ಒಂದು ವ್ಯವಸ್ಥೆ ಎಂದು ಅವರು ಹೇಳಿದರು.
ಯಾವುದೇ ಬಣ್ಣ, ಜಾತಿ, ಮತ, ಧರ್ಮದ ಭೇದವಿಲ್ಲದೆ ಪ್ರತಿಯೊಬ್ಬರು ಸಮಾನ ರೀತಿಯಲ್ಲಿ ಇರುವ ಅವಕಾಶ ಕಲ್ಪಿಸಿರುವುದು ಸಂವಿಧಾನ. ಸಂವಿಧಾನ ಇಲ್ಲದ ಸಂದರ್ಭದಲ್ಲಿ ದೇಶ ಹೇಗಿತ್ತು ಮತ್ತು ಸಂವಿಧಾನ ಬಂದ ನಂತರ ದೇಶ ಹೇಗೆ ಬದಲಾಯಿತು ಎಂಬ ವಿಚಾರವನ್ನು ಯುವಜನತೆ ಅರಿತುಕೊಳ್ಳಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ, ಮಂಗಳೂರು ಉಪ ವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ಉಪಸ್ಥಿತರಿದ್ದರು.

ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ್ ಗಟ್ಟಿ ಅಧ್ಯಕ್ಷತೆ ವಹಿಸಿದ್ದರು. ಅಪರ ಜಿಲ್ಲಾಧಿಕಾರಿ ರಾಜು ಕೆ ಸಂವಿಧಾನ ಪೀಠಿಕೆ ವಾಚಿಸಿದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಡಾ. ಬಿ. ಎಸ್ ಹೇಮಲತಾ ಸ್ವಾಗತಿಸಿದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸುರೇಶ್ ಅಡಿಗ ವಂದಿಸಿ, ಪ್ರದೀಪ್ ಡಿ.ಎಂ ಹಾವಂಜೆ ನಿರೂಪಿಸಿದರು.


Spread the love
Subscribe
Notify of

0 Comments
Inline Feedbacks
View all comments