2018ರ ಗ್ಯಾಂಗ್ ರೇಪ್ ಕೇಸ್ ನ ನಾಲ್ವರು ಅಪರಾಧಿಗಳಿಗೆ 20 ವರ್ಷ ಕಠಿಣ ಶಿಕ್ಷೆ 

Spread the love

2018ರ ಗ್ಯಾಂಗ್ ರೇಪ್ ಕೇಸ್ ನ ನಾಲ್ವರು ಅಪರಾಧಿಗಳಿಗೆ 20 ವರ್ಷ ಕಠಿಣ ಶಿಕ್ಷೆ 

ಮಂಗಳೂರು:  2018ರಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ನಾಲ್ವರು ಆರೋಪಿಗಳಿಗೆ ತಲಾ 20 ವರ್ಷಗಳ ಕಠಿನ ಕಾರಾಗೃಹ ಶಿಕ್ಷೆ ಹಾಗೂ ಒಟ್ಟು 74 ಸಾವಿರ ರೂ. ದಂಡ ವಿಧಿಸಿದೆ.

ಪ್ರಕರಣದಲ್ಲಿ ಪ್ರಜ್ವಲ್ (33), ಅರುಣ್ ಅಮೀನ್ (34), ಆದಿತ್ಯ ಸಾಲ್ಯಾನ್ (28) ಹಾಗೂ ಅಬ್ದುಲ್ ರಿಯಾಜ್ (40) ಶಿಕ್ಷೆಗೆ ಗುರಿಯಾದ ಅಪರಾಧಿಗಳಾಗಿದ್ದಾರೆ.

2018ರ ನವೆಂಬರ್ 18ರಂದು ಯುವತಿಯೊಬ್ಬಳು ತನ್ನ ಗೆಳೆಯನೊಂದಿಗೆ ಬೀಚ್‌ಗೆ ತೆರಳಿದ್ದ ವೇಳೆ, ಮೂವರು ಅಪ್ರಾಪ್ತ ವಯಸ್ಸಿನ ಬಾಲಕರು ಸೇರಿದಂತೆ ಒಟ್ಟು ಏಳು ಮಂದಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಯನ್ನು ಮಹಿಳಾ ಠಾಣೆಯ ಅಂದಿನ ಪೊಲೀಸ್ ನಿರೀಕ್ಷಕಿ ಕಲಾವತಿ ಕೆ. ಹಾಗೂ ಅಂದಿನ ಎಸಿಪಿ ಮಂಜುನಾಥ ಶೆಟ್ಟಿ ಸಮಗ್ರವಾಗಿ ನಡೆಸಿದ್ದರು. ಬಳಿಕ ಅಂದಿನ ಎಸಿಪಿ ಶ್ರೀನಿವಾಸ ಗೌಡ ಆರ್. ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಜಗದೀಶ ವಿ.ಎನ್., ಆರೋಪಿತರ ವಿರುದ್ಧದ ಆರೋಪಗಳು ಸಾಬೀತಾಗಿವೆ ಎಂದು ತೀರ್ಮಾನಿಸಿ, ನಾಲ್ವರಿಗೆ 20 ವರ್ಷಗಳ ಕಠಿನ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಅಭಿಯೋಜನೆ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಸಾಕ್ಷಿಗಳ ವಿಚಾರಣೆ ನಡೆಸಿ ವಾದ ಮಂಡಿಸಿದ್ದರು.

ಇದೇ ಪ್ರಕರಣದಲ್ಲಿ ಆರೋಪಿಗಳಾಗಿರುವ ಮೂವರು ಅಪ್ರಾಪ್ತ ವಯಸ್ಸಿನ ಬಾಲಕರ ವಿರುದ್ಧದ ವಿಚಾರಣೆ ಪ್ರಸ್ತುತ ಬಾಲ ನ್ಯಾಯ ಮಂಡಳಿಯಲ್ಲಿ ಮುಂದುವರಿಯುತ್ತಿದೆ.


Spread the love
Subscribe
Notify of

0 Comments