ಪರ್ಯಾಯ ಮೂಲಸೌಕರ್ಯಕ್ಕೆ 6 ಕೋಟಿ ರೂ. : ಉಸ್ತುವಾರಿ ಸಚಿವೆ – ರಾಜ್ಯ ಸರಕಾರಕ್ಕೆ ಪ್ರಸಾದ್ ರಾಜ್ ಕಾಂಚನ್ ಕೃತಜ್ಞತೆ
ಉಡುಪಿ: ಪರ್ಯಾಯದ ಹಿನ್ನೆಲೆಯಲ್ಲಿ ಸುಮಾರು 6 ಕೋಟಿ ರೂ.ಗಳ ವೆಚ್ಚದಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದು ಶ್ಲಾಘನೀಯ ಕಾರ್ಯ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಹೇಳಿದ್ದಾರೆ.

ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳ ಜೊತೆ ಮಂಗಳವಾರ ವಿಡಿಯೋ ಸಂವಾದ ನಡೆಸಿದ ಸಚಿವರು, ಪರ್ಯಾಯ ಸುಗಮವಾಗಿ ನಡೆಯಲು ರಸ್ತೆ ಅಭಿವೃದ್ಧಿ ಸೇರಿದಂತೆ ನಗರದಲ್ಲಿ ಅಗತ್ಯವಿರುವ ಎಲ್ಲ ವ್ಯವಸ್ಥೆ ಮಾಡಬೇಕು. ಸಮಯಾವಕಾಶ ಕಡಿಮೆ ಇರುವುದರಿಂದ ಸಮರೋಪಾದಿಯಲ್ಲಿ ಹಗಲು- ರಾತ್ರಿ ಕೆಲಸ ಮಾಡಬೇಕು. ಜಿಲ್ಲೆಯ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯಾವುದೇ ಕೊರತೆಯಾಗದಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಪರ್ಯಾಯ ಮಹೋತ್ಸವದ ಯಶಸ್ಸಿಗೆ 6 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಸೇರಿದಂತೆ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲು ಸೂಚಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ತುಂಬು ಹೃದಯದ ಧನ್ಯವಾದಗಳು. ಈ ನಿಟ್ಟಿನಲ್ಲಿ ವಿಶೇಷ ಸಹಕಾರ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಉಡುಪಿ ವಿಧಾನಸಭೆ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.












