7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಉಪ್ಪಿನಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 158/2015ನೇ ಪ್ರಕರಣಕ್ಕೆ ಸಂಬಂಧಿಸಿದಂತೆ, ಭಾರತೀಯ ದಂಡ ಸಂಹಿತೆಯ (ಐಪಿಸಿ) ಕಲಂ 457 ಮತ್ತು 380ರಡಿ ಆರೋಪಿಯಾಗಿದ್ದ ಹಾಗೂ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಕಳೆದ ಸುಮಾರು ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಂಗಳೂರು ಕಸಬಾ ಬೇಂಗ್ರೆ ನಿವಾಸಿ ಅಕ್ರಂ @ ಬೋಜ ಅಕ್ರ ಎಂದು ಗುರುತಿಸಲಾಗಿದೆ.
ದಿನಾಂಕ 22-05-2026ರಂದು, ಉಪ್ಪಿನಂಗಡಿ ಪೊಲೀಸ್ ಠಾಣೆಯ ತನಿಖೆ-2 ವಿಭಾಗದ ಪಿಎಸ್ಐ ಕೌಶೀಕ್ ಬಿ.ಸಿ. ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಎಚ್‌ಸಿ-826 ಶಿವರಾಮ್ ರೈ ಹಾಗೂ ಪಿಸಿ-2277 ಮಹದೇವ ಅವರು ಮಂಗಳೂರಿನ ಪಣಂಬೂರಿನಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಇದೇ ಆರೋಪಿಯ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ಹಾಗೂ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಈಗಾಗಲೇ ದಾಖಲಾಗಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.













