6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ
ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಬಂಧಿತನನ್ನು ಮಂಗಳೂರು ಬಜಾಲ್-ನಂತೂರು ನಿವಾಸಿ ಮಹಮ್ಮದ್ ನೌಫಲ್ @ ಸಫಾರಿ ನೌಫಲ್ (34) ಎಂದು ಗುರುತಿಸಲಾಗಿದೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯ ಅ.ಕ್ರ. 24/2020ರಲ್ಲಿ ಐಪಿಸಿ ಕಲಂ 143, 147, 148, 504, 323, 324, 506, 427 ಜೊತೆಗೆ 149 ಹಾಗೂ Prevention of Destruction and Loss of Property Actನ ಕಲಂ 2(a) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ನೌಫಲ್, ಸೆ.15ರಂದು ವಿದೇಶದಿಂದ ಮಂಗಳೂರಿಗೆ ಮರಳುತ್ತಿದ್ದ ವೇಳೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾನೆ.
ಈ ಬಗ್ಗೆ ಮಾಹಿತಿ ಪಡೆದ ಬಂಟ್ವಾಳ ನಗರ ಪೊಲೀಸರು, ಇಮಿಗ್ರೇಷನ್ ವಿಭಾಗದ ಸಹಕಾರದೊಂದಿಗೆ ವಿಮಾನ ನಿಲ್ದಾಣದಲ್ಲೇ ಆತನನ್ನು ದಸ್ತಗಿರಿ ಮಾಡಿದ್ದಾರೆ.
ನಂತರ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆ.29, 2026ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.













