ಬಿಜೆಪಿಯ ಶಾಸಕ, ಸಂಸದರಿಗೆ ಚುನಾವಣೆ ಗೆಲ್ಲುವುದೊಂದೇ ಗುರಿ: ಪದ್ಮರಾಜ್ ಆರ್. ಪೂಜಾರಿ
ಮಂಗಳೂರು: ರೈತರನ್ನು ರಕ್ಷಿಸಬೇಕು ಹಾಗೂ ಹೈನುಗಾರಿಕೆಗೆ ಪ್ರೋತ್ಸಾಹ ನೀಡಬೇಕು ಎಂಬ ಉದ್ದೇಶದಿಂದ ವಿಧಾನಮಂಡಲದಲ್ಲಿ ಚರ್ಚಿಸಿ ಹಾಲಿನ ದರ ಹೆಚ್ಚಿಸಲಾಗಿದೆ. ಹೆಚ್ಚುವರಿ ಹಣ ನೇರವಾಗಿ ಹಾಲು ಉತ್ಪಾದಕರಿಗೆ ತಲುಪಲಿದೆ. ಇದನ್ನು ವಿರೋಧಿಸುತ್ತಿರುವ ಬಿಜೆಪಿಯವರು ರೈತರಿಗೆ ಈ ಹಣ ನೀಡುವುದು ಬೇಡ ಎಂದಾದರೆ ಅದನ್ನು ಸ್ಪಷ್ಟವಾಗಿ ಹೇಳಲಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸವಾಲು ಹಾಕಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಚುನಾವಣೆ ಗೆಲ್ಲುವುದೊಂದೇ ಬಿಜೆಪಿಯ ಶಾಸಕರು ಮತ್ತು ಸಂಸದರ ಗುರಿಯಾಗಿದೆ. ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಅಥವಾ ರೈತರ ಹಿತದೃಷ್ಟಿಯಿಂದ ಕೈಗೊಳ್ಳುವ ನಿರ್ಧಾರಗಳಿಗೆ ಬೆಂಬಲ ನೀಡುವ ಮನೋಭಾವ ಅವರಲ್ಲಿಲ್ಲ ಎಂದು ಆರೋಪಿಸಿದರು.
ಬಿಜೆಪಿ ನಾಯಕರು ಜನರ ಮುಂದೆ ಬಂದು ಸರ್ಕಾರ ಹಾಲಿನ ದರ ಹೆಚ್ಚಿಸಿದೆ ಎಂದು ಟೀಕಿಸುತ್ತಿದ್ದಾರೆ. ಬಸ್ ಪ್ರಯಾಣ ದರ ಏರಿಕೆ ವಿಚಾರದಲ್ಲಿಯೂ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ.
ದೇಶದಲ್ಲಿ ಇಂಧನ ದರವನ್ನು ಕೇಂದ್ರ ಸರ್ಕಾರ ಯಾವ ಮಟ್ಟಕ್ಕೆ ಹೆಚ್ಚಿಸಿದೆ ಎಂಬ ಕನಿಷ್ಠ ಅರಿವು ಅವರಿಗಿಲ್ಲವೇ ಎಂದು ಪ್ರಶ್ನಿಸಿದ ಅವರು, ಹಿಂದಿನ ಅವಧಿಯಲ್ಲಿ ಬಿಜೆಪಿ ಸರ್ಕಾರ ಎಷ್ಟು ಬಾರಿ ಇಂಧನ ದರ ಹೆಚ್ಚಿಸಿತ್ತು ಎಂಬುದನ್ನು ಜನರು ನೆನಪಿಸಿಕೊಳ್ಳಬೇಕು ಎಂದರು.
ಕೆಎಸ್ಸಾರ್ಟಿಸಿ ದೇಶದಲ್ಲೇ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸುವ ಸಂಸ್ಥೆಯಾಗಿದ್ದು, 50ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ಪಡೆದಿದೆ. ಬಸ್ಗಳ ಗುಣಮಟ್ಟ, ಪ್ರಯಾಣಿಕರಿಗೆ ಒದಗಿಸುವ ಸೌಲಭ್ಯಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಮಹಾರಾಷ್ಟ್ರ ಸೇರಿದಂತೆ ಇತರ ರಾಜ್ಯಗಳ ಸಾರಿಗೆ ವ್ಯವಸ್ಥೆಗೆ ಹೋಲಿಸಿದರೆ ಕರ್ನಾಟಕದ ಬಸ್ಗಳ ಗುಣಮಟ್ಟ ಮತ್ತು ಸೇವೆಯ ಮಟ್ಟ ಸ್ಪಷ್ಟವಾಗುತ್ತದೆ. ಸಂಸ್ಥೆಯನ್ನು ವ್ಯವಸ್ಥಿತವಾಗಿ ಮುನ್ನಡೆಸುವ ಜತೆಗೆ ಪ್ರಯಾಣಿಕರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಕೆಲಸ ನಡೆಯುತ್ತಿದೆ ಎಂದು ಹೇಳಿದರು.
2023ರಲ್ಲಿ ಕೆಎಸ್ಸಾರ್ಟಿಸಿ ಸುಮಾರು 5,800 ಕೋಟಿ ರೂ. ಸಾಲ ಹೊಂದಿತ್ತು. ಇದೀಗ ಸಾಲದ ಪ್ರಮಾಣ 5,300 ಕೋಟಿ ರೂ.ಗೆ ಇಳಿಕೆಯಾಗಿದೆ. ಆದರೆ ಬಿಜೆಪಿ ಆಡಳಿತಾವಧಿಯಲ್ಲಿ ಕೆಎಸ್ಸಾರ್ಟಿಸಿ ಸಿಬ್ಬಂದಿ ವೇತನಕ್ಕಾಗಿ ತಟ್ಟೆ ಹಿಡಿದು ಬೀದಿಗಿಳಿದು ಪ್ರತಿಭಟನೆ ನಡೆಸಿದ ಸ್ಥಿತಿಯನ್ನೂ ಜನರು ನೋಡಿದ್ದಾರೆ ಎಂದು ಅವರು ಟೀಕಿಸಿದರು.
ಬಿಜೆಪಿಯ ಆರೋಪಗಳಿಗೆ ತಕ್ಕ ಉತ್ತರ ನೀಡಲು ಕಾಂಗ್ರೆಸ್ ಮುಂದಾಗಿದ್ದು, ಜಿಲ್ಲೆಯ ಎಲ್ಲ ಬ್ಲಾಕ್ಗಳಲ್ಲಿಯೂ ಪತ್ರಿಕಾಗೋಷ್ಠಿ ನಡೆಸಿ, ಗ್ರಾಮಮಟ್ಟದಲ್ಲಿ ಜನಾಂದೋಲನ ರೂಪಿಸಲಾಗುವುದು. ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜನರಿಗೆ ವಾಸ್ತವಾಂಶಗಳನ್ನು ತಿಳಿಸುವ ಜಾಗೃತಿ ಕಾರ್ಯಕ್ರಮಗಳನ್ನು ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಹಮ್ಮಿಕೊಳ್ಳಲಿದ್ದಾರೆ ಎಂದರು.
ಕರ್ನಾಟಕಕ್ಕೆ ಕೇಂದ್ರದಿಂದ ಸಿಗಬೇಕಾದ ಸೌಲಭ್ಯಗಳು, ಅನುದಾನ ಹಾಗೂ ರಾಜ್ಯದ ಹಿತಾಸಕ್ತಿಯ ವಿಚಾರಗಳನ್ನು ಸಂಸದರು ಸಂಸತ್ತಿನಲ್ಲಿ ಪ್ರಸ್ತಾಪಿಸಬೇಕು. ಆದರೆ ರಾಜ್ಯದ ಪರವಾಗಿ ಧ್ವನಿ ಎತ್ತುವ ಬದಲು ಪ್ರಧಾನಿಯವರ ಮಾತು ಕೇಳಿಕೊಂಡು ಬರುವ ಕೆಲಸ ಮಾಡುತ್ತಿದ್ದಾರೆಯೇ ಎಂಬ ಪ್ರಶ್ನೆ ಮೂಡುತ್ತಿದೆ. ರಾಜ್ಯ ಸರ್ಕಾರದ ವಿರುದ್ಧ ಬೀದಿಯಲ್ಲಿ ಆರೋಪ ಮಾಡುವ ಮೊದಲು ಕರ್ನಾಟಕಕ್ಕೆ ನ್ಯಾಯಯುತವಾಗಿ ಸಿಗಬೇಕಾದ ಜಿಎಸ್ಟಿ ಪಾಲನ್ನು ತರುವ ಪ್ರಯತ್ನ ಮಾಡಲಿ ಎಂದು ಅವರು ಆಗ್ರಹಿಸಿದರು.
ದೇಶದಲ್ಲಿ ಮಾಧ್ಯಮಗಳ ಮೇಲೆ ಪ್ರಭಾವ ಬೀರುವ ಮತ್ತು ಅವುಗಳನ್ನು ನಿಯಂತ್ರಿಸುವ ಪ್ರಯತ್ನಗಳು ನಡೆಯುತ್ತಿವೆ. ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಆಶಯಗಳ ರಕ್ಷಣೆಗಾಗಿ ಕಾಂಗ್ರೆಸ್ ಮಾತ್ರವಲ್ಲದೆ ಇಂಡಿಯಾ ಒಕ್ಕೂಟದ ಪಕ್ಷಗಳು ಮತ್ತು ವಿವಿಧ ಸಂಘಟನೆಗಳು ಬೀದಿಗಿಳಿದಿವೆ. ಶಾಲಾ-ಕಾಲೇಜು ವಿದ್ಯಾರ್ಥಿಗಳೂ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮಹತ್ವ ಅರಿತು ಧ್ವನಿ ಎತ್ತುತ್ತಿರುವುದು ಗಮನಾರ್ಹ. ಬಿಜೆಪಿಯ ಅಪಪ್ರಚಾರದಿಂದ ಮತ್ತೆ ಅಧಿಕಾರಕ್ಕೆ ಬರುವ ಕನಸು ನನಸಾಗುವುದಿಲ್ಲ. ಬಿಜೆಪಿಯ ಅಂತ್ಯಕಾಲ ಸಮೀಪಿಸುತ್ತಿದೆ ಎಂದು ಹೇಳಿದರು.













