ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ಚಿಕಿತ್ಸೆಗೆ ಹೆಚ್ಚುವರಿ ಹಣ ವಸೂಲಿ ಮಾಡಿದರೆ ಕ್ರಮ: ಡಾ. ತಿಮ್ಮಯ್ಯ

Spread the love

ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ಚಿಕಿತ್ಸೆಗೆ ಹೆಚ್ಚುವರಿ ಹಣ ವಸೂಲಿ ಮಾಡಿದರೆ ಕ್ರಮ: ಡಾ. ತಿಮ್ಮಯ್ಯ

ಮಂಗಳೂರು: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಪ್ಯಾಕೇಜ್ ವ್ಯಾಪ್ತಿಗೆ ಒಳಪಡುವ ಚಿಕಿತ್ಸೆಯನ್ನು ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ನೀಡಬೇಕು. ಈ ಚಿಕಿತ್ಸೆಗಳಿಗಾಗಿ ರೋಗಿಗಳಿಂದ ಹೆಚ್ಚುವರಿ ಹಣ ವಸೂಲಿ ಮಾಡಬಾರದು. ಫಲಾನುಭವಿಗಳಿಂದ ಹಣ ಪಡೆದಿರುವ ಬಗ್ಗೆ ದೂರುಗಳು ಬಂದಿದ್ದು, ಅಂತಹ ಪ್ರಕರಣಗಳಲ್ಲಿ ಹಣವನ್ನು ಹಿಂದಿರುಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ತಿಳಿಸಿದ್ದಾರೆ.

ತಮ್ಮ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 20 ದಿನಗಳ ಹಿಂದೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳ ಸಭೆ ನಡೆಸಿ, ಆಯುಷ್ಮಾನ್ ಯೋಜನೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ ಎಂದರು.

2018ರಲ್ಲಿ ಜಾರಿಗೆ ಬಂದ ಆಯುಷ್ಮಾನ್ ಭಾರತ್ ಯೋಜನೆಯಡಿ ಒಂದು ಕುಟುಂಬಕ್ಕೆ ವರ್ಷಕ್ಕೆ ₹5 ಲಕ್ಷದವರೆಗೆ ಉಚಿತ ಚಿಕಿತ್ಸೆಯ ಸೌಲಭ್ಯ ಲಭ್ಯವಿದೆ. ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ಒದಗಿಸಲು ಪ್ರತ್ಯೇಕ ಪ್ಯಾಕೇಜ್‌ಗಳನ್ನು ನಿಗದಿಪಡಿಸಲಾಗಿದೆ. ಯೋಜನೆಯ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ಎಲ್ಲ ಆಸ್ಪತ್ರೆಗಳಲ್ಲೂ ಕಾಣುವ ಸ್ಥಳದಲ್ಲಿ ಮಾಹಿತಿ ಕೇಂದ್ರಗಳನ್ನು ಸ್ಥಾಪಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ರಸ್ತೆ ಅಪಘಾತ ಸಂತ್ರಸ್ತರಿಗೆ ಪಿಎಂ ರಾಹತ್ ಯೋಜನೆ

ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ತುರ್ತು ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪಿಎಂ ರಾಹತ್ ಯೋಜನೆಯನ್ನು ಜಾರಿಗೆ ತರುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಡಾ. ತಿಮ್ಮಯ್ಯ ಹೇಳಿದರು. ಈ ಯೋಜನೆಯಡಿ ಕೇಂದ್ರ ಸರ್ಕಾರದಿಂದ ₹1.5 ಲಕ್ಷದವರೆಗೆ ಉಚಿತ ಚಿಕಿತ್ಸೆ ನೀಡಲು ಉದ್ದೇಶಿಸಲಾಗಿದ್ದು, ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ₹1 ಲಕ್ಷ ನೆರವು ನೀಡಲಿದೆ ಎಂದು ಮಾಹಿತಿ ನೀಡಿದರು.

ಮೋಟಾರು ವಾಹನ ಕಾಯ್ದೆಯಡಿ ರಸ್ತೆ ಅಪಘಾತ ಸಂತ್ರಸ್ತರಿಗೆ ಅಗತ್ಯ ತುರ್ತು ಚಿಕಿತ್ಸೆ ನೀಡುವುದನ್ನು ಆಸ್ಪತ್ರೆಗಳು ನಿರಾಕರಿಸುವಂತಿಲ್ಲ. ಈ ಯೋಜನೆಯಲ್ಲಿ ಎಪಿಎಲ್ ಮತ್ತು ಬಿಪಿಎಲ್ ಎಂಬ ಯಾವುದೇ ಭೇದವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ದಡಾರ–ರುಬೆಲ್ಲಾ ಲಸಿಕೆ ಹಾಕಿಸಲು ಮನವಿ

ಬಾಂಗ್ಲಾದೇಶದಲ್ಲಿ ದಡಾರ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಜಾಗರೂಕರಾಗಿರಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಮನವಿ ಮಾಡಿದರು. ದಡಾರ ಸೋಂಕು ಮುಖ್ಯವಾಗಿ ಮಕ್ಕಳಲ್ಲಿ ಹಾಗೂ ರೋಗನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು ಎಂದು ಎಚ್ಚರಿಸಿದರು.

ದಡಾರ ಮತ್ತು ರುಬೆಲ್ಲಾ ತಡೆಗಟ್ಟಲು ಮಕ್ಕಳಿಗೆ 9 ತಿಂಗಳ ವಯಸ್ಸಿನಲ್ಲಿ ಮೊದಲ ಹಂತದ ಹಾಗೂ 16 ತಿಂಗಳ ವಯಸ್ಸಿನಲ್ಲಿ ಎರಡನೇ ಹಂತದ ಲಸಿಕೆ ನೀಡಲಾಗುತ್ತದೆ. ಪೋಷಕರು ತಮ್ಮ ಮಕ್ಕಳಿಗೆ ನಿಗದಿತ ಸಮಯದಲ್ಲಿ ಎರಡೂ ಹಂತದ ಲಸಿಕೆ ಹಾಕಿಸಬೇಕು ಎಂದು ಅವರು ಹೇಳಿದರು.

ರುಬೆಲ್ಲಾ ಸೋಂಕು ಗರ್ಭಾವಸ್ಥೆಯಲ್ಲಿ ತಗುಲಿದರೆ ಭ್ರೂಣದ ಬೆಳವಣಿಗೆಯ ಮೇಲೆ ಪರಿಣಾಮ ಬೀರಬಹುದು ಹಾಗೂ ಜನ್ಮಜಾತ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಆದ್ದರಿಂದ ಲಸಿಕೆ ಪಡೆಯುವ ಮೂಲಕ ಈ ಸೋಂಕುಗಳಿಂದ ರಕ್ಷಣೆ ಪಡೆಯುವುದು ಅಗತ್ಯ ಎಂದು ಡಾ. ತಿಮ್ಮಯ್ಯ ತಿಳಿಸಿದರು.


Spread the love
Subscribe
Notify of

0 Comments