ಕೃಷ್ಣಾಪುರ ಮದ್ರಸ ಅಧ್ಯಾಪಕರ ಮೇಲಿನ ಹಲ್ಲೆ ಖಂಡನೀಯ – ಎಸ್.ಎಂ.ಎ. ಉಡುಪಿ ರಿಜಿನಲ್ ಅಧ್ಯಕ್ಷ ಜನಾಬ್ ಹಬೀಬ್ ಅಲಿ
ಉಡುಪಿ: ಕೃಷ್ಣಾಪುರ ಮದ್ರಸ ಅಧ್ಯಾಪಕರ ಮೇಲೆ ನಡೆದಿರುವ ಹಲ್ಲೆ ಘಟನೆ ಅತ್ಯಂತ ಖಂಡನೀಯವಾಗಿದ್ದು, ಇಂತಹ ಕಾನೂನುಬಾಹಿರ ಕೃತ್ಯಗಳು ಸಮಾಜದ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುತ್ತವೆ ಎಂದು ಎಸ್.ಎಂ.ಎ. ಉಡುಪಿ ರಿಜಿನಲ್ ಅಧ್ಯಕ್ಷರು ಹಾಗೂ ಹಿರಿಯ ವಕೀಲರಾದ ಜನಾಬ್ ಹಬೀಬ್ ಅಲಿ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಧಾರ್ಮಿಕ ಶಿಕ್ಷಣವನ್ನು ನೀಡುತ್ತಿರುವ ಅಧ್ಯಾಪಕರ ಮೇಲೆ ಹಲ್ಲೆ ನಡೆಸುವುದು ಯಾವುದೇ ಕಾರಣಕ್ಕೂ ಸಮರ್ಥನೀಯವಲ್ಲ. ತಪ್ಪಿತಸ್ಥರನ್ನು ಯಾವುದೇ ಒತ್ತಡಕ್ಕೆ ಮಣಿಯದೆ ತಕ್ಷಣವೇ ಬಂಧಿಸಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಹಾಗೂ ಸಂಬಂಧಿತ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ಮದ್ರಸ ಅಧ್ಯಾಪಕರು ಸೇರಿದಂತೆ ಎಲ್ಲ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಸಮಾಜದ ಎಲ್ಲ ವರ್ಗದ ಜನರು ಶಾಂತಿ, ಸೌಹಾರ್ದತೆ ಮತ್ತು ಪರಸ್ಪರ ಗೌರವವನ್ನು ಕಾಪಾಡುವ ನಿಟ್ಟಿನಲ್ಲಿ ಸಂಯಮದಿಂದ ವರ್ತಿಸಬೇಕು ಎಂದು ಜನಾಬ್ ಹಬೀಬ್ ಅಲಿ ಅವರು ಮನವಿ ಮಾಡಿದ್ದಾರೆ.
