ತಲವಾರು, ಕಬ್ಬಿಣದ ರಾಡ್‌ನಿಂದ ಹಲ್ಲೆ: ಮೂವರು ಆರೋಪಿಗಳ ಬಂಧನ
- ಬಂಟ್ವಾಳದಲ್ಲಿ ವ್ಯಕ್ತಿಗೆ ತೀವ್ರ ರಕ್ತಗಾಯ – ಆರೋಪಿಗಳಿಗೆ 3 ದಿನ ಪೊಲೀಸ್ ಕಸ್ಟಡಿ
ಬಂಟ್ವಾಳ: ವ್ಯಕ್ತಿಯೊಬ್ಬರ ಮೇಲೆ ತಲವಾರು ಹಾಗೂ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಸೆಪ್ಟೆಂಬರ್ 20ರಂದು ಸಂಜೆ ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಮ್ಮಾಜೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ತೆಂಕಬೆಳ್ಳೂರು ನಿವಾಸಿ ಪ್ರಶಾಂತ್ ಬೆಳ್ಚಾಡ್ (41) ಎಂಬವರು ನೀಡಿದ ದೂರಿನ ಪ್ರಕಾರ, ಅಮ್ಮುಂಜೆ ನಿವಾಸಿ ಪ್ರಶಾಂತ್ (38), ತೆಂಕಬೆಳ್ಳೂರು ನಿವಾಸಿ ರಾಮದಾಸ್ (43) ಹಾಗೂ ಬಡಗಬೆಳ್ಳೂರು ನಿವಾಸಿ ಶಂಕರ (45) ಎಂಬವರು ಆಟೋರಿಕ್ಷಾದಲ್ಲಿ ಬಂದು ತಲವಾರು ಹಾಗೂ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾರೆ.
ಹಲ್ಲೆಯಿಂದ ಪ್ರಶಾಂತ್ ಬೆಳ್ಚಾಡ್ ಅವರಿಗೆ ತೀವ್ರ ರಕ್ತಗಾಯಗಳಾಗಿದ್ದು, ಬಳಿಕ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಗಾಯಾಳುವಿನ ಪರಿಚಯದವರು ಸ್ಥಳಕ್ಕೆ ಬರುತ್ತಿರುವುದನ್ನು ಕಂಡ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 124/2026ರಂತೆ ಬಿಎನ್‌ಎಸ್ ಕಲಂ 109, 352, 351 ಜೊತೆಗೆ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು ಆರೋಪಿಗಳಾದ ಪ್ರಶಾಂತ್, ರಾಮದಾಸ್ ಹಾಗೂ ಶಂಕರ ಅವರನ್ನು ಬಂಧಿಸಿದ್ದಾರೆ. ಸೆಪ್ಟೆಂಬರ್ 25ರಂದು ಮೂವರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ 3 ದಿನಗಳ ಪೊಲೀಸ್ ಕಸ್ಟಡಿಗೆ ನ್ಯಾಯಾಲಯ ಆದೇಶಿಸಿದೆ.
ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.













