ಬೆಳ್ತಂಗಡಿ : ಜಲಪಾತಕ್ಕೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ ಆರೋಪ, ಮೂವರು ಯುವಕರ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಜಲಪಾತ ಪ್ರದೇಶದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕೇರಳದ ಕಾಸರಗೋಡು ಮೂಲದ ಮೂವರು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ.
ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು ಮೇ 20, 2026ರಂದು ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ, ಅವರೊಂದಿಗೆ ಇದ್ದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಹಾಗೂ ಉಸ್ಮಾನ್ ಸಾಲೀಂ (18) ಎಂಬವರು ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ.
ಯುವತಿಯರು ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರು ಮಧ್ಯಪ್ರವೇಶಿಸಿ ಆರೋಪಿಗಳನ್ನು ತಡೆದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಬೆಳ್ತಂಗಡಿ ಪೊಲೀಸ್ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.
ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 60/2026ರಂತೆ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
