ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಖಂಡನೀಯ ಕೃತ್ಯ – ರೆನೋಲ್ಡ್ ಪ್ರವೀಣ್ ಕುಮಾರ್
ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ನ್ಯಾಯಾಂಗ ವ್ಯವಸ್ಥೆಯ ಮೇಲೆ ಭಯದ ವಾತಾವರಣ ಸೃಷ್ಟಿಸುವ ದುರುದ್ದೇಶದ ಕೃತ್ಯವಾಗಿದೆ ಎಂದು ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ತೀವ್ರ ಆತಂಕ ಹಾಗೂ ಕಳವಳ ವ್ಯಕ್ತಪಡಿಸಿದ್ದಾರೆ.
ನ್ಯಾಯಾಲಯವು ನ್ಯಾಯದ ದೇವಾಲಯವಾಗಿದ್ದು, ಇಂತಹ ಬೆದರಿಕೆಗಳು ನ್ಯಾಯಾಂಗದ ಕಾರ್ಯನಿರ್ವಹಣೆಗೆ ಅಡ್ಡಿಯಾಗುವ ಪ್ರಯತ್ನಗಳಾಗಿವೆ. ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ, ಬೆದರಿಕೆಯ ಹಿಂದಿರುವ ವ್ಯಕ್ತಿಗಳು ಅಥವಾ ಸಂಘಟನೆಗಳನ್ನು ಶೀಘ್ರ ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ, ತನ್ಮೂಲಕ ನ್ಯಾಯಾಲಯಗಳ ಕಲಾಪಗಳಿಗೆ ಅಡ್ಡಿಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ. ಇದರ ಜತೆಗೆ ಉಡುಪಿ ನ್ಯಾಯಾಲಯಗಳ ಭದ್ರತೆಯನ್ನು ಮತ್ತಷ್ಟು ಬಲಪಡಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.













