Home Mangalorean News Kannada News ಸಿಸಿಬಿ ಕಾರ್ಯಾಚರಣೆ: 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿಯ ಬಂಧನ

ಸಿಸಿಬಿ ಕಾರ್ಯಾಚರಣೆ: 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿಯ ಬಂಧನ

Spread the love

ಸಿಸಿಬಿ ಕಾರ್ಯಾಚರಣೆ: 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿಯ ಬಂಧನ

ಮಂಗಳೂರು: 2015ರಲ್ಲಿ ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಸುಮಾರು 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಚುಂಕಿ ಆಕಾಶಭವನ @ ಸಂತೋಷ್ ಎಸ್. (34), ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಮಲ್ಲೇನಹಳ್ಳಿ ಪೋಸ್ಟ್‌ನ ಕರ್ನೇಳ್ಳಿ ವಿಲೇಜ್ ನಿವಾಸಿ ಎಂದು ಗುರುತಿಸಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, 2015ರಲ್ಲಿ ಮಂಗಳೂರು ನಗರದ ಆಕಾಶಭವನದಲ್ಲಿ ನಡೆದ ಮದುವೆಯ ಮದುರಂಗಿ ಕಾರ್ಯಕ್ರಮದ ವೇಳೆ ಅಶೋಕ ಕುಮಾರ ಕೊಟ್ಟಾರಿ ಹಾಗೂ ಜಗ್ಗು ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ವೇಳೆ ಪ್ರಮುಖ ಆರೋಪಿಯಾಗಿರುವ ಸಂತೋಷ್, ಇತರ ಆರೋಪಿಗಳಾದ ರಂಜಿತ್, ಧನು, ಧೂಮ, ಸ್ವೀಟಿ @ ನರೇಶ್ ಹಾಗೂ ಜಗ್ಗು ಅವರೊಂದಿಗೆ ಸೇರಿ ಅಶೋಕ ಕುಮಾರ ಕೊಟ್ಟಾರಿ ಅವರ ಮೇಲೆ ತಲವಾರಿನಿಂದ ಹಲ್ಲೆ ನಡೆಸಿ ಗಂಭೀರ ಗಾಯಗೊಳಿಸಿ ಕೊಲೆ ಯತ್ನ ನಡೆಸಿದ್ದ ಎನ್ನಲಾಗಿದೆ.

ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 135/2015ರಡಿ ಕೊಲೆಯತ್ನ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಬಳಿಕ ಸಂತೋಷ್ ತಲೆಮರೆಸಿಕೊಂಡಿದ್ದು, ಸುಮಾರು 11 ವರ್ಷಗಳಿಂದ ಪೊಲೀಸರ ಕೈಗೆ ಸಿಕ್ಕಿರಲಿಲ್ಲ. ಬಳಿಕ ನ್ಯಾಯಾಲಯವು ಆತನ ವಿರುದ್ಧ LPC ವಾರಂಟ್ (ಸಂಖ್ಯೆ 25/2025) ಜಾರಿಗೊಳಿಸಿತ್ತು.

ಆರೋಪಿಯ ಕುರಿತು ನಿರಂತರವಾಗಿ ಮಾಹಿತಿ ಸಂಗ್ರಹಿಸುತ್ತಿದ್ದ ಮಂಗಳೂರು ಸಿಸಿಬಿ ಪೊಲೀಸರಿಗೆ, ಆತ ಶಿವಮೊಗ್ಗ ಭಾಗದಲ್ಲಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ಅದರಂತೆ ಜುಲೈ 29ರಂದು ಹಾವೇರಿ ಜಿಲ್ಲೆಯ ಚಿಕ್ಕೇರೂರು ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

ಬಂಧಿತ ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಕಾವೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದ್ದು, ಆರೋಪಿಯ ಪತ್ತೆ ಕಾರ್ಯಾಚರಣೆಯಲ್ಲಿ ಮಂಗಳೂರು ಸಿಸಿಬಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.


Spread the love

Exit mobile version