ಅಂಗಡಿ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಹಲ್ಲೆ ಆರೋಪ, ಪ್ರತ್ಯೇಕ ಪ್ರಕರಣ ದಾಖಲು

Spread the love

ಅಂಗಡಿ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಹಲ್ಲೆ ಆರೋಪ, ಪ್ರತ್ಯೇಕ ಪ್ರಕರಣ ದಾಖಲು

ಬೆಳ್ತಂಗಡಿ: ಕೊಕ್ಕಡ ಗ್ರಾಮದ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್‌ ಕಟ್ಟಡದಲ್ಲಿರುವ ಅಂಗಡಿಯ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಹಲ್ಲೆ, ಸೊತ್ತುಗಳಿಗೆ ಹಾನಿ ಹಾಗೂ ಜೀವ ಬೆದರಿಕೆ ಆರೋಪದಡಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಕೃಷ್ಣ ಭಟ್ ಎಂಬವರು ಧರ್ಮಸ್ಥಳ ಪೊಲೀಸರಿಗೆ ನೀಡಿದ ದೂರಿನ ಪ್ರಕಾರ, ಅ.18ರಂದು ಬೆಳಿಗ್ಗೆ ಅಂಗಡಿಯಲ್ಲಿ ರಾಘವ ಭಂಡಾರಿ ಮತ್ತು ಅವರ ಕೆಲಸಗಾರರು ವ್ಯಾಪಾರ ಮಾಡುತ್ತಿದ್ದ ವೇಳೆ, ಈ ಹಿಂದೆ ಅಲ್ಲಿ ವ್ಯಾಪಾರ ನಡೆಸುತ್ತಿದ್ದ ಹರೀಶ್, ಅವರ ಪತ್ನಿ, ಮಕ್ಕಳು ಹಾಗೂ ಇತರರು ಅಂಗಡಿಯೊಳಗೆ ಅಕ್ರಮವಾಗಿ ಪ್ರವೇಶಿಸಿದ್ದಾರೆ. ಈ ವೇಳೆ ಸುಮಾರು 25 ಸಾವಿರ ರೂ. ಮೌಲ್ಯದ ಸೊತ್ತುಗಳಿಗೆ ಹಾನಿ ಮಾಡಿದ್ದಾರೆ. ಅಲ್ಲದೆ, ರಾಘವ ಭಂಡಾರಿ ಮತ್ತು ಅವರ ಕೆಲಸಗಾರರ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಈ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ. 78/2026ರಂತೆ ಪ್ರಕರಣ ದಾಖಲಾಗಿದೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಅಂಗಡಿ ನಡೆಸುತ್ತಿದ್ದ ಹರಿಶ್ಚಂದ್ರ ಅವರ ಪತ್ನಿಯೂ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ. ಸೌತಡ್ಕ ದೇವಸ್ಥಾನದ ಬಳಿ ಇರುವ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಹರಿಶ್ಚಂದ್ರ ಅವರ ಅಂಗಡಿಗೆ ರಾಘವ ಭಂಡಾರಿ, ಲಿಂಗಪ್ಪ, ಕಿಶೋರ್ ಮತ್ತು ಚೇತನ್ ಎಂಬವರು ಅಕ್ರಮವಾಗಿ ಪ್ರವೇಶಿಸಿ, ಅಂಗಡಿಯ ಸೊತ್ತುಗಳನ್ನು ಹೊರಗೆ ಎಸೆದಿದ್ದಾರೆ. ಅಲ್ಲದೆ, ಹರಿಶ್ಚಂದ್ರ, ಅವರ ಪತ್ನಿ ಹಾಗೂ ಕೆಲಸಗಾರರ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ. 79/2026ರಂತೆ ಮತ್ತೊಂದು ಪ್ರಕರಣ ದಾಖಲಾಗಿದೆ.

ಎರಡೂ ಪ್ರಕರಣಗಳ ಕುರಿತು ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.


Spread the love
Subscribe
Notify of

0 Comments