ಸಿಎಂ ಡಿ.ಕೆ. ಶಿವಕುಮಾರ್, ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ನಟ ಧನ್ವೀರ್ ಅವಹೇಳನಕಾರಿ ಹೇಳಿಕೆ ಖಂಡನೀಯ: ಕೀರ್ತನ್ ಗೌಡ ಕೊಡಪಾಲ
ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ನಟ ಧನ್ವೀರ್ ಅವರು ನೀಡಿದ್ದಾರೆ ಎನ್ನಲಾದ ಅವಹೇಳನಕಾರಿ ಹಾಗೂ ಆಕ್ಷೇಪಾರ್ಹ ಹೇಳಿಕೆಗಳ ಕುರಿತು ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಎನ್ಎಸ್ಯುಐ ದ.ಕ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಕೀರ್ತನ್ ಗೌಡ ಕೊಡಪಾಲ ಆಗ್ರಹಿಸಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಹಕ್ಕಿದೆ. ರಾಜಕೀಯ ಭಿನ್ನಾಭಿಪ್ರಾಯಗಳಿರಬಹುದು, ವಿಚಾರಧಾರೆಗಳು ಬೇರೆಬೇರೆಯಾಗಿರಬಹುದು. ಆದರೆ, ಭಿನ್ನಾಭಿಪ್ರಾಯಗಳನ್ನು ವ್ಯಕ್ತಪಡಿಸುವ ನೆಪದಲ್ಲಿ ವೈಯಕ್ತಿಕ ನಿಂದನೆ ಅಥವಾ ಆಕ್ಷೇಪಾರ್ಹ ಪದಪ್ರಯೋಗಗಳಿಗೆ ಅವಕಾಶ ನೀಡಬಾರದು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಪ್ರಮುಖ ಸಾಂವಿಧಾನಿಕ ಹುದ್ದೆಯಲ್ಲಿದ್ದು, ಸಚಿವ ಜಮೀರ್ ಅಹ್ಮದ್ ಖಾನ್ ಅವರು ರಾಜ್ಯ ಸರ್ಕಾರದ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಂತಹ ಸಾರ್ವಜನಿಕ ವ್ಯಕ್ತಿಗಳ ಕುರಿತು ಯಾವುದೇ ಟೀಕೆ ಮಾಡುವಾಗ ವಿಷಯಾಧಾರಿತವಾಗಿ ಮಾತನಾಡುವುದು ಆರೋಗ್ಯಕರ ಪ್ರಜಾಪ್ರಭುತ್ವದ ಲಕ್ಷಣವಾಗಿದೆ.
ಸಿನಿಮಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಕಲಾವಿದರು ಹಾಗೂ ಸಾರ್ವಜನಿಕವಾಗಿ ಪ್ರಭಾವ ಹೊಂದಿರುವ ವ್ಯಕ್ತಿಗಳು ತಮ್ಮ ಮಾತುಗಳು ಸಮಾಜದ ಮೇಲೆ ಬೀರುವ ಪರಿಣಾಮವನ್ನು ಅರಿತುಕೊಳ್ಳಬೇಕು. ಯುವಜನತೆ ಸೇರಿದಂತೆ ಸಾವಿರಾರು ಜನರು ಕಲಾವಿದರನ್ನು ಅನುಸರಿಸುತ್ತಾರೆ. ಸಾರ್ವಜನಿಕ ವೇದಿಕೆಗಳಲ್ಲಿ ಮಾತನಾಡುವಾಗ ಜವಾಬ್ದಾರಿಯುತ ನಡವಳಿಕೆ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ನಟ ಧನ್ವೀರ್ ಅವರ ಹೇಳಿಕೆಗಳನ್ನು ಪರಿಶೀಲಿಸಬೇಕು. ಹೇಳಿಕೆಗಳಲ್ಲಿ ಕಾನೂನು ಉಲ್ಲಂಘನೆ ಕಂಡುಬಂದಲ್ಲಿ ಪಕ್ಷಪಾತವಿಲ್ಲದೆ ಕಾನೂನು ಸೂಕ್ತ ಕ್ರಮ ಕೈಗೊಳ್ಳಬೇಕು. ಕೀರ್ತನ್ ಗೌಡ ಕೊಡಪಾಲ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.
