ಬ್ರಹ್ಮಾವರದಲ್ಲಿ ಎಸ್.ಐ.ಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಜ್ಞಾನೇಶ್ ಕುಮಾರ್ ಅಣಕು ಶವಯಾತ್ರೆ
ಉಡುಪಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ಮತ್ತು ಪಾದಯಾತ್ರೆ ಸೋಮವಾರ ನಡೆಯಿತು.
ಬ್ರಹ್ಮಾವರದ ಬಂಟರ ಭವನದಿಂದ ಆರಂಭವಾದ ಪಾದಯಾತ್ರೆ ಆಕಾಶವಾಣಿ ವೃತ್ತ, ಗಾಂಧಿ ಮೈದಾನ, ಮಾರ್ಕೆಟ್ ರಸ್ತೆ ಮೂಲಕ ಬಸ್ ನಿಲ್ದಾಣದವರೆಗೆ ಸಾಗಿತು. ಈ ಸಂದರ್ಭದಲ್ಲಿ ಜ್ಞಾನೇಶ್ ಕುಮಾರ್ ಅವರ ಅಣಕು ಶವಯಾತ್ರೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಬಳಿಕ ಪ್ರತಿಕೃತಿ ದಹಿಸಿ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್, ಎಸ್ಐಆರ್ ಅಸ್ತ್ರದ ಮೂಲಕ ಮಧ್ಯಮ ವರ್ಗದವರು, ಬಡವರು ಹಾಗೂ ಕಾರ್ಮಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.
ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿಯೂ ಸುಮಾರು 15 ಸಾವಿರ ಮಂದಿಯನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಆರೋಪಿಸಿದ ಅವರು, ಗ್ರಾಮೀಣ ಭಾಗದ ಅನಕ್ಷರಸ್ಥರು ಹಾಗೂ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ಜನರ ಮತದಾನದ ಹಕ್ಕಿಗೆ ಧಕ್ಕೆಯಾಗಿದೆ ಎಂದು ದೂರಿದರು.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ದೇಶದ ಪ್ರಜ್ಞಾವಂತ ಮತದಾರರ ಮುಂದೆ ಇಂತಹ ತಂತ್ರಗಳು ನಡೆಯುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಜನರು ಬಿಜೆಪಿಯನ್ನು ಸೋಲಿಸಿ ಮನೆಗೆ ಕಳುಹಿಸಲಿದ್ದಾರೆ ಎಂದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ಎಸ್ಐಆರ್ ಜಾರಿಗೊಳಿಸಿದೆ ಎಂದು ಆರೋಪಿಸಿದ ಅವರು, ಬಡವರು ಹಾಗೂ ಹಿಂದುಳಿದ ವರ್ಗಗಳ ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ದ್ರೋಹವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡದಿದ್ದರೆ ದೇಶಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು ಎಂದು ಹೇಳಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಮಾತನಾಡಿದರು. ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕರ್ಜೆ, ಮುಖಂಡರಾದ ವೆರೋನಿಕಾ ಕರ್ನೇಲಿಯೋ, ಉದಯ್ ಆಚಾರ್, ಕುಮಾರ್, ಅಮೃತ್ ಶೆಣೈ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.













