ಶಿಕ್ಷಣದಿಂದ ದೇಶದಲ್ಲಿಯೇ ಉನ್ನತ ಸ್ಥಾನಕ್ಕೇರಿದ ದಕ್ಷಿಣ ಕನ್ನಡ ಜಿಲ್ಲೆ – ಜಿಲ್ಲಾಧಿಕಾರಿ ದರ್ಶನ್ ಹೆಚ್. ವಿ
ಮಂಗಳೂರು: ಗುಣಮಟ್ಟದ ಶಿಕ್ಷಣ ವ್ಯವಸ್ಥೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯು ದೇಶದಲ್ಲಿಯೇ ಉನ್ನತ ಸ್ಥಾನಕ್ಕೇರಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್. ವಿ ತಿಳಿಸಿದ್ದಾರೆ.
ಅವರು ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಈ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಸ್ಥಾನ ಪಡೆದ ವಿದ್ಯಾರ್ಥಿಗಳ ಹಾಗೂ ಉತ್ತಮ ಫಲಿತಾಂಶ ಪಡೆದ ಶಾಲೆಗಳಿಗೆ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆಯು ಮುಂಚೂಣಿಯಲ್ಲಿದೆ. ಅಂಕ ಗಳಿಕೆಯ ಶಿಕ್ಷಣಕ್ಕಿಂತಲೂ ಗುಣಮಟ್ಟದ ಶಿಕ್ಷಣಕ್ಕೆ ಜಿಲ್ಲೆಯು ಖ್ಯಾತಿ ಪಡೆದಿದೆ. ಇದರಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು, ಹೆತ್ತವರು, ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆಯ ಪಾತ್ರವೂ ಅಪಾರವಾಗಿದೆ ಎಂದು ಅವರು ತಿಳಿಸಿದರು.
ಕೇವಲ ಮಾಕ್ರ್ಸ್ ಪಡೆಯುವುದು ಮಾತ್ರ ಶಿಕ್ಷಣವಲ್ಲ. ಮಕ್ಕಳ ಸರ್ವತೋಮುಖ ಬೆಳವಣಿಗೆಯು ಪ್ರಮುಖವಾಗಿದೆ. ಪರಿಪೂರ್ಣವಾದ ಶಿಕ್ಷಣವನ್ನು ನೀಡಲು ಪ್ರತಿಯೊಬ್ಬರು ಪ್ರಯತ್ನಿಸಬೇಕು ಎಂದು ಅವರು ಹೇಳಿದರು.
ಈ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ರಾಜ್ಯದಲ್ಲಿ ಮೊದಲ ಸ್ಥಾನಕ್ಕೇರಿದೆ. ಮುಂದಿನ ವರ್ಷವೂ ಈ ಸ್ಥಾನವನ್ನು ಉಳಿಸಿಕೊಳ್ಳುವುದು ದೊಡ್ಡ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ, ಶಿಕ್ಷಕರು, ಪಾಲಕರು ಮತ್ತು ವಿದ್ಯಾರ್ಥಿಗಳು ಪ್ರಯತ್ನಿಸಬೇಕು ಎಂದು ಅವರು ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ ಮಾತನಾಡಿ, ಈ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಯು ಫಲಿತಾಂಶದಲ್ಲಿ ಉನ್ನತ ಸ್ಥಾನಕ್ಕೇರಿರುವುದು ಮಾತ್ರವಲ್ಲದೆ ಅನುತ್ತೀರ್ಣರಾಗುವವರ ಪ್ರಮಾಣವೂ ಕಡಿಮೆಯಾಗಿದೆ. ಇದೊಂದು ಟೀಂ ವರ್ಕ್ ಆಗಿದ್ದು, ಇದರಲ್ಲಿ ಪಾಲ್ಗೊಂಡವರನ್ನು ಅಭಿನಂದಿಸುವುದಾಗಿ ತಿಳಿಸಿದರು.
ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶಶಿಧರ್ ಮಾತನಾಡಿ, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 27207 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ 26772 ಉತ್ತೀರ್ಣ ಹಾಗೂ 435 ಅನುತ್ತೀರ್ಣರಾಗಿ ಶೇ.98.40 ಫಲಿತಾಂಶ ಬಂದಿದೆ. 349 ಶಾಲೆಗಳು ಶೇ.100 ಫಲಿತಾಂಶ ಪಡೆದಿದ್ದು, ಈ ಪೈಕಿ 110 ಸರಕಾರಿ, 50 ಅನುದಾನಿತ ಹಾಗೂ 189 ಅನುದಾನ ರಹಿತ ಶಾಲೆಗಳಾಗಿವೆ. 826 ವಿದ್ಯಾರ್ಥಿಗಳು 600 ಕ್ಕಿಂತ ಹೆಚ್ಚು ಅಂಕ ಪಡೆದಿದ್ದಾರೆ. 523 ಶಾಲೆಗಳು ಎ ಗ್ರೇಡ್ ಪಡೆದಿದೆ ಎಂದು ತಿಳಿಸಿದರು.
ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ಉಪಸ್ಥಿತರಿದ್ದರು.
ಸನ್ಮಾನ
ಸಮಾರಂಭದಲ್ಲಿ ಈ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಪಡೆದ ಸರ್ಕಾರಿ ಹಾಗೂ ಅನುದಾನಿತ ಶಾಲೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಅದೇ ರೀತಿ ಶೇಕಡಾ 100 ರಷ್ಟು ಫಲಿತಾಂಶ ಪಡೆದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮುಖ್ಯೋಪಾಧ್ಯಾಯರನ್ನು ಗೌರವಿಸಲಾಯಿತು.
