Home Mangalorean News Local News ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ ಆರೋಪಿ ಕಾಲಿಗೆ ಗುಂಡು

ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ ಆರೋಪಿ ಕಾಲಿಗೆ ಗುಂಡು

Spread the love

ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ ಆರೋಪಿ ಕಾಲಿಗೆ ಗುಂಡು

ಉಡುಪಿ: ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಿ ಕರೆತರುತ್ತಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ, ಪಿಎಸ್ಐಯವರ ಪಿಸ್ತೂಲ್ ಕಸಿದು ಗುಂಡು ಹಾರಿಸಿದ ಆರೋಪಿಗೆ ಪೊಲೀಸರು ಆತ್ಮರಕ್ಷಣೆಗಾಗಿ ಕಾಲಿಗೆ ಗುಂಡು ಹಾರಿಸಿರುವ ಘಟನೆ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮುಂಬೈ ಮೂಲದ ಕುಖ್ಯಾತ ಗ್ಯಾಂಗ್ಸ್ಟರ್ ಅನುಜ್ ಪಾಟೀಲ್ (35) ಗುಂಡೇಟಿಗೆ ಒಳಗಾದ ಆರೋಪಿಯಾಗಿದ್ದು, ಆತನನ್ನು ಚಿಕಿತ್ಸೆಗಾಗಿ ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಗಸ್ಟ್ 7ರಂದು ಮಧ್ಯಾಹ್ನ 3.45ರ ಸುಮಾರಿಗೆ ಕಾಪು ತಾಲೂಕಿನ ಮುದರಂಗಡಿ ಸೇಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್ನಲ್ಲಿ ಪ್ರಿನ್ಸ್ ಎಂಟರ್ಪ್ರೈಸಸ್ ಮಾಲಕ ಡೇವಿಡ್ ಡಿಸೋಜಾ ಅವರನ್ನು ಮೋಟಾರ್ ಸೈಕಲ್ನಲ್ಲಿ ಬಂದಿದ್ದ ದುಷ್ಕರ್ಮಿಗಳ ಪೈಕಿ ಸಹಸವಾರ ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿತ್ತು.

ಪ್ರಕರಣದ ತನಿಖೆಯ ಭಾಗವಾಗಿ ಕುಂದಾಪುರ ಪೊಲೀಸ್ ಠಾಣೆಯ ಪಿಎಸ್ಐ ನಂಜ ನಾಯಕ್, ಕೊಲ್ಲೂರು ಠಾಣೆಯ ಪಿಎಸ್ಐ ವಿನಯ್ ಹಾಗೂ ಸಿಬ್ಬಂದಿ ತಂಡವು ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ, ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮೂವರು ಶೂಟರ್ಗಳನ್ನು ಕಳುಹಿಸಿದ ಆರೋಪದ ಮೇಲೆ ಮುಂಬೈನ ಗ್ಯಾಂಗ್ಸ್ಟರ್ ಅನುಜ್ ಪಾಟೀಲ್ನನ್ನು ಬೆಳಗ್ಗೆ 6ರಿಂದ 6.30ರ ನಡುವೆ ಬಂಧಿಸಿತ್ತು.

ಬಂಧಿಸಿ ಕರೆತರುತ್ತಿದ್ದ ವೇಳೆ ಅನುಜ್ ಪಾಟೀಲ್ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಬಳಿಕ ಕೊಲ್ಲೂರು ಪಿಎಸ್ಐ ವಿನಯ್ ಅವರ ಆಯುಧವನ್ನು ಕಸಿದುಕೊಂಡು ಪೊಲೀಸರತ್ತ ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವೇಳೆ ಆತ್ಮರಕ್ಷಣೆಗಾಗಿ ಕುಂದಾಪುರ ಪಿಎಸ್ಐ ನಂಜ ನಾಯಕ್ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡ ಅನುಜ್ ಪಾಟೀಲ್ನನ್ನು ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪೊಲೀಸರ ಪ್ರಕಾರ, ಅನುಜ್ ಪಾಟೀಲ್ ಮುಂಬೈನಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, 2017ರಿಂದ ತಲೆಮರೆಸಿಕೊಂಡಿದ್ದ. ಆತನ ವಿರುದ್ಧ ಮಹಾರಾಷ್ಟ್ರದಲ್ಲಿ MCOCA ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಆರೋಪಿಯ ವಿರುದ್ಧ ಒಟ್ಟು 11 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 10 ಪ್ರಕರಣಗಳು Arms Act ಅಡಿ ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ನಾಲ್ಕು, ಗುಜರಾತ್ನಲ್ಲಿ ಐದು, ದಮನ್ ಮತ್ತು ದಿಯುನಲ್ಲಿ ಒಂದು ಹಾಗೂ ಕರ್ನಾಟಕದಲ್ಲಿ ಒಂದು ಪ್ರಕರಣ ದಾಖಲಾಗಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಇನ್ನಷ್ಟು ಆರೋಪಿಗಳ ಬಂಧನ ಹಾಗೂ ಕೃತ್ಯದ ಹಿಂದಿರುವ ಜಾಲದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Spread the love

Exit mobile version