ಕ್ರೈಸ್ತ ಅಭಿವೃದ್ಧಿ ನಿಗಮದ ನಿಯೋಗದಿಂದ ಸಚಿವ ಯು.ಟಿ. ಖಾದರ್ ಭೇಟಿ: ಮತಾಂತರ ನಿಷೇಧ ಕಾಯ್ದೆಯ ಕುರಿತು ಚರ್ಚೆ

Spread the love

ಕ್ರೈಸ್ತ ಅಭಿವೃದ್ಧಿ ನಿಗಮದ ನಿಯೋಗದಿಂದ ಸಚಿವ ಯು.ಟಿ. ಖಾದರ್ ಭೇಟಿ: ಮತಾಂತರ ನಿಷೇಧ ಕಾಯ್ದೆಯ ಕುರಿತು ಚರ್ಚೆ

ಬೆಂಗಳೂರು: ಕರ್ನಾಟಕ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ನಿರ್ದೇಶಕರನ್ನೊಳಗೊಂಡ ನಿಯೋಗವು ವಿಧಾನಸೌಧದಲ್ಲಿರುವ ಸಚಿವರ ಕಚೇರಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಯು.ಟಿ. ಖಾದರ್ ಅವರನ್ನು ಭೇಟಿಯಾಗಿ ಸಮುದಾಯದ ಅಭಿವೃದ್ಧಿ ಹಾಗೂ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಸಿತು.

ಸಭೆಯಲ್ಲಿ ಕ್ರೈಸ್ತ ಸಮುದಾಯದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಸಂಬಂಧಿಸಿದ ವಿಚಾರಗಳು, ಮುಂದಿನ ದಿನಗಳಲ್ಲಿ ಸಮುದಾಯದ ಕಲ್ಯಾಣಕ್ಕಾಗಿ ಕೈಗೊಳ್ಳಬೇಕಾದ ಯೋಜನೆಗಳು ಹಾಗೂ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು.

ಇದೇ ಸಂದರ್ಭದಲ್ಲಿ ಪ್ರಸ್ತಾಪಿತ ಮತಾಂತರ ನಿಷೇಧ ಕಾಯ್ದೆಯ ಬಗ್ಗೆಯೂ ಚರ್ಚೆ ನಡೆಸಲಾಯಿತು. ಈ ವಿಷಯದಲ್ಲಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳು, ಕ್ರೈಸ್ತ ಸಮುದಾಯದ ನಿಲುವು ಮತ್ತು ಅಭಿಪ್ರಾಯಗಳನ್ನು ಸಚಿವರ ಗಮನಕ್ಕೆ ತರಲಾಯಿತು.

ನಿಯೋಗದ ಸದಸ್ಯರು ಮಂಡಿಸಿದ ವಿಚಾರಗಳನ್ನು ಆಲಿಸಿದ ಸಚಿವ ಯು.ಟಿ. ಖಾದರ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಕ್ರೈಸ್ತ ಸಮುದಾಯದ ಅಭಿವೃದ್ಧಿ ಮತ್ತು ಕಲ್ಯಾಣ ಕಾರ್ಯಗಳಿಗೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು ಎಂದು ತಿಳಿಸಲಾಗಿದೆ.

ನಿಯೋಗದಲ್ಲಿ ಕರ್ನಾಟಕ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷ ಪ್ರೊ. ಎಸ್. ಜಾಫೆಟ್, ಉಪಾಧ್ಯಕ್ಷೆ ವಿನಿಷಾ ನೀರೋ, ನಿರ್ದೇಶಕರಾದ ಪ್ರಶಾಂತ್ ಜತ್ತನ್ನ, ಹರ್ಷ ಮೆಲ್ವಿನ್ ಲಸ್ರಾದೋ, ರವಿಕುಮಾರ್ ಬಳ್ಳಾರಿ ಹಾಗೂ ಮೈಸೂರಿನ ಸಂದೀಪ್ ಕುಮಾರ್ ಸೇರಿದಂತೆ ಇತರ ಗಣ್ಯರು ಮತ್ತು ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

ಕ್ರೈಸ್ತ ಸಮುದಾಯದ ಸರ್ವತೋಮುಖ ಅಭಿವೃದ್ಧಿ, ಹಕ್ಕುಗಳ ರಕ್ಷಣೆ ಹಾಗೂ ಸಮುದಾಯದ ಹಿತಾಸಕ್ತಿಗೆ ಸಂಬಂಧಿಸಿದ ವಿಚಾರಗಳಲ್ಲಿ ಸರ್ಕಾರದೊಂದಿಗೆ ನಿರಂತರ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಈ ಭೇಟಿ ಮಹತ್ವ ಪಡೆದಿದೆ.


Spread the love
Subscribe
Notify of

0 Comments