ಮತಾಂತರ ನಿಷೇಧ ಕಾಯ್ದೆ ರದ್ದು, ಮುಸ್ಲಿಮರ 2ಬಿ ಮೀಸಲಾತಿ ಮರುಸ್ಥಾಪನೆಗೆ ಆಗ್ರಹ: ನ. 9ರಂದು ಬೆಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಸಮಾವೇಶ
ಬೆಂಗಳೂರು: ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ-2022 (ಮತಾಂತರ ನಿಷೇಧ ಕಾಯ್ದೆ) ರದ್ದುಪಡಿಸುವುದು, ಮುಸ್ಲಿಮರ 2ಬಿ ಮೀಸಲಾತಿ ಮರುಸ್ಥಾಪನೆ ಹಾಗೂ ದ್ವೇಷ ಭಾಷಣಗಳ ವಿರುದ್ಧ ಕಠಿಣ ಕಾನೂನು ಕ್ರಮ ಸೇರಿದಂತೆ ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನವೆಂಬರ್ 9ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಹಕ್ಕೊತ್ತಾಯ ಸಮಾವೇಶ ಆಯೋಜಿಸಲಾಗಿದೆ ಎಂದು ಬೆಂಗಳೂರಿನ ಆರ್ಚ್ಬಿಷಪ್ ಡಾ. ಪೀಟರ್ ಮಚಾದೊ ತಿಳಿಸಿದ್ದಾರೆ.
ನಗರದ ಪಾಲನಾ ಭವನದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟ, ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘ, ದಲಿತ ಸಂಘರ್ಷ ಸಮಿತಿ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಪಡಿಸಬೇಕು ಮತ್ತು ದ್ವೇಷ ಭಾಷಣಗಳ ವಿರುದ್ಧದ ಕಾನೂನನ್ನು ಮತ್ತಷ್ಟು ಬಲಪಡಿಸಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ-2022 ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಅಧಿಕಾರಕ್ಕೆ ಬಂದರೆ ಈ ಕಾಯ್ದೆಯನ್ನು ಹಿಂಪಡೆಯುವುದಾಗಿ ಕಾಂಗ್ರೆಸ್ ಪಕ್ಷ ಚುನಾವಣೆಯ ಸಂದರ್ಭದಲ್ಲಿ ಭರವಸೆ ನೀಡಿತ್ತು. ವಿಧಾನ ಪರಿಷತ್ತಿನಲ್ಲಿ ತನ್ನ ಬಲ ಹೆಚ್ಚಾದರೆ ಕಾಯ್ದೆಯನ್ನು ಕಡ್ಡಾಯವಾಗಿ ರದ್ದುಪಡಿಸುವುದಾಗಿಯೂ ತಿಳಿಸಿತ್ತು. ಆದ್ದರಿಂದ ಮುಂಬರುವ ಚಳಿಗಾಲದ ಅಧಿವೇಶನದಲ್ಲೇ ಕಾಯ್ದೆ ಹಿಂಪಡೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಮತಾಂತರ ನಿಷೇಧ ಕಾಯ್ದೆಯಿಂದ ಧಾರ್ಮಿಕ ಸ್ವಾತಂತ್ರ್ಯಕ್ಕೆ ಮಾತ್ರವಲ್ಲದೆ ಸಮಾಜದ ಶಾಂತಿ, ಸುವ್ಯವಸ್ಥೆ ಮತ್ತು ಸೌಹಾರ್ದಕ್ಕೂ ಧಕ್ಕೆಯಾಗುತ್ತಿದೆ ಎಂಬುದು ಅವರ ಆರೋಪ. ಕಾಯ್ದೆಯನ್ನು ದುರುಪಯೋಗಪಡಿಸಿಕೊಂಡು ಕ್ರೈಸ್ತರ ಪ್ರಾರ್ಥನಾ ಸಭೆಗಳು ಮತ್ತು ಪಾದ್ರಿಗಳ ಮೇಲೆ ದಾಳಿ ಹಾಗೂ ಕಿರುಕುಳ ನೀಡಲಾಗುತ್ತಿದೆ. ಕೆಲವು ಸಂದರ್ಭಗಳಲ್ಲಿ ಇಂತಹ ದೌರ್ಜನ್ಯಗಳ ವಿರುದ್ಧ ದೂರು ನೀಡಿದರೂ ಪೊಲೀಸರು ಸ್ವೀಕರಿಸುತ್ತಿಲ್ಲ ಎಂದು ಡಾ. ಪೀಟರ್ ಮಚಾದೊ ಅಸಮಾಧಾನ ವ್ಯಕ್ತಪಡಿಸಿದರು.
ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಕಳೆದಿದ್ದರೂ ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವ ವಿಚಾರದಲ್ಲಿ ಮೌನ ವಹಿಸಿರುವುದು ಖಂಡನೀಯ. ರಾಜ್ಯದಲ್ಲಿ ಧಾರ್ಮಿಕ ಸ್ವಾತಂತ್ರ್ಯವನ್ನು ರಕ್ಷಿಸಿ ಎಲ್ಲ ಸಮುದಾಯಗಳಿಗೂ ಸಮಾನ ನ್ಯಾಯ ಒದಗಿಸಬೇಕು. ಅಲ್ಪಸಂಖ್ಯಾತ ಸಮುದಾಯಗಳನ್ನು ಗುರಿಯಾಗಿಸಿಕೊಂಡು ದ್ವೇಷ, ಬೆದರಿಕೆ ಮತ್ತು ಹಿಂಸಾಚಾರ ನಡೆಸುತ್ತಿರುವ ಘಟನೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಗೃಹ ಇಲಾಖೆ ಇಂತಹ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವುದರೊಂದಿಗೆ ದ್ವೇಷ ಭಾಷಣಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟದ ಸಂಚಾಲಕ ಸುಹೇಲ್ ಅಹ್ಮದ್ ಮರೂರ್ ಮಾತನಾಡಿ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಹಲವು ಭರವಸೆಗಳನ್ನು ನೀಡಿತ್ತು. ಆದರೆ, ಮೂರು ವರ್ಷ ಕಳೆದರೂ ಅಲ್ಪಸಂಖ್ಯಾತರು ಮತ್ತು ದಲಿತ ಸಮುದಾಯಗಳ ಹಲವು ಬೇಡಿಕೆಗಳು ಈಡೇರಿಲ್ಲ. ವಿಶೇಷವಾಗಿ ಮುಸ್ಲಿಮರ 2ಬಿ ಮೀಸಲಾತಿ ಮರುಸ್ಥಾಪನೆ ಸೇರಿದಂತೆ ಪ್ರಮುಖ ಭರವಸೆಗಳು ಬಾಕಿ ಉಳಿದಿವೆ. ಈ ಎಲ್ಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲು ನವೆಂಬರ್ 9ರಂದು ನಡೆಯುವ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕು ಎಂದು ಕರೆ ನೀಡಿದರು.
ಕರ್ನಾಟಕವು ಧಾರ್ಮಿಕ, ಸಾಂಸ್ಕೃತಿಕ ಮತ್ತು ಭಾಷಿಕ ವೈವಿಧ್ಯತೆಯ ಶ್ರೀಮಂತ ಪರಂಪರೆಯನ್ನು ಹೊಂದಿದೆ. ವಿಭಿನ್ನ ನಂಬಿಕೆಗಳು, ಸಮುದಾಯಗಳು ಮತ್ತು ಪರಂಪರೆಗಳ ಜನರು ಪರಸ್ಪರ ಗೌರವ ಹಾಗೂ ಘನತೆಯಿಂದ ಬದುಕುವುದೇ ರಾಜ್ಯದ ನಿಜವಾದ ಶಕ್ತಿ. ಈ ಹಿನ್ನೆಲೆಯಲ್ಲಿ ಸಂವಿಧಾನಿಕ ಮೌಲ್ಯಗಳ ಮೇಲಿನ ಬದ್ಧತೆಯನ್ನು ರಾಜ್ಯ ಸರ್ಕಾರ ಸ್ಪಷ್ಟವಾದ ಕಾನೂನು ಕ್ರಮಗಳ ಮೂಲಕ ತೋರಿಸಬೇಕು ಎಂದು ಸಂಘಟನೆಗಳ ಮುಖಂಡರು ಮನವಿ ಮಾಡಿದರು.
ಹಿಂದಿನ ಸರ್ಕಾರ ಜಾರಿಗೆ ತಂದ ಜನವಿರೋಧಿ ಕಾನೂನುಗಳನ್ನು ರದ್ದುಪಡಿಸುವುದು, ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆಯುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಅಗತ್ಯ. ಧಾರ್ಮಿಕ ಸ್ವಾತಂತ್ರ್ಯ, ಮಾನವ ಘನತೆ, ಆರ್ಥಿಕ ಭದ್ರತೆ ಮತ್ತು ಸಮಾನತೆಯನ್ನು ರಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಸಮಾವೇಶದ ಪ್ರಮುಖ ಹಕ್ಕೊತ್ತಾಯಗಳು:
- ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ-2022 (ಮತಾಂತರ ನಿಷೇಧ ಕಾಯ್ದೆ) ರದ್ದುಪಡಿಸಬೇಕು.
- ಮುಸ್ಲಿಮರ 2ಬಿ ಮೀಸಲಾತಿಯನ್ನು ಮರುಸ್ಥಾಪಿಸಬೇಕು.
- ದ್ವೇಷ ಭಾಷಣಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.
- ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳಿಗೆ ಕಡಿವಾಣ ಹಾಕಬೇಕು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟದ ಸಂಚಾಲಕ ಮುಹಮ್ಮದ್ ಯಾಹ್ಯಾ ದಾಮುದಿ, ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಟಿ. ಯಶವಂತ್, ದಲಿತ ಸಂಘರ್ಷ ಸಮಿತಿ ಮುಖಂಡ ಬಸವರಾಜ ಕೌತಾಳ್, ಯುವ ಹೋರಾಟಗಾರರಾದ ಸರೋವರ್ ಬೆಂಕಿಕೆರೆ, ಐಶ್ವರ್ಯಾ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.
