ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಪಿ. ರಾಧಾಕೃಷ್ಣನ್
ಧರ್ಮಸ್ಥಳ: ಭಾರತದ ಉಪರಾಷ್ಟ್ರಪತಿ ಪಿ. ರಾಧಾಕೃಷ್ಣನ್ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಸಹ ಉಪಸ್ಥಿತರಿದ್ದರು. ಉಪರಾಷ್ಟ್ರಪತಿಗಳು ಸಾಂಪ್ರದಾಯಿಕ ಉಡುಪಿನಲ್ಲಿ ದೇವಾಲಯ ಪ್ರವೇಶಿಸಿ ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ದೇವರ ದರ್ಶನದ ಬಳಿಕ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ನಂತರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಕೆಲಕಾಲ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು.
ಈ ವೇಳೆ ಧರ್ಮಸ್ಥಳ ಕ್ಷೇತ್ರದ ಮೂಲಕ ನಡೆಯುತ್ತಿರುವ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರೋಗ್ಯ ಸೇವಾ ಚಟುವಟಿಕೆಗಳನ್ನು ಉಪರಾಷ್ಟ್ರಪತಿಗಳು ಶ್ಲಾಘಿಸಿದರು. ಸಮಾಜದ ವಿವಿಧ ವರ್ಗಗಳ ಅಭಿವೃದ್ಧಿಗೆ ಕ್ಷೇತ್ರ ನೀಡುತ್ತಿರುವ ಕೊಡುಗೆ ಶ್ಲಾಘನೀಯವಾಗಿದ್ದು, ಇಂತಹ ಸೇವಾ ಕಾರ್ಯಗಳು ಇತರರಿಗೆ ಮಾದರಿಯಾಗಿವೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಉಪರಾಷ್ಟ್ರಪತಿಗಳ ಭೇಟಿ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಅಗತ್ಯ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿತ್ತು.













