ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚರ್ಚೆ
ಮಂಗಳೂರು: ಮಂಗಳೂರಿನಲ್ಲಿ ಸುಸಜ್ಜಿತ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸುವ ಉದ್ದೇಶದಿಂದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಹಾಗೂ ಪದಾಧಿಕಾರಿಗಳೊಂದಿಗೆ ಮಹತ್ವದ ಚರ್ಚೆ ನಡೆಸಿದರು.
ಮಂಗಳೂರಿನಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಆಸಕ್ತಿ ವ್ಯಕ್ತಪಡಿಸಿರುವ ವೆಂಕಟೇಶ್ ಪ್ರಸಾದ್ ಅವರು, ಸೂಕ್ತ ಸ್ಥಳ ಗುರುತಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ಮಂಗಳೂರಿಗೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ಯೋಜನೆ ಕುರಿತು ಚರ್ಚಿಸುವುದಾಗಿ ಅವರು ಹೇಳಿದ್ದಾರೆ.

ಮಂಗಳೂರು ಎಲ್ಲಾ ರೀತಿಯ ಸಂಪರ್ಕ ವ್ಯವಸ್ಥೆ ಹೊಂದಿರುವ ನಗರವಾಗಿದ್ದು, ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಸೂಕ್ತ ಸ್ಥಳವಾಗಿದೆ. ಇದರ ಪ್ರಯೋಜನ ಪಡೆದುಕೊಳ್ಳಲು KSCA ಮುಂದಾಗಿದ್ದು, ಯೋಜನೆಯನ್ನು ಶೀಘ್ರ ಕಾರ್ಯರೂಪಕ್ಕೆ ತರಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ವೆಂಕಟೇಶ್ ಪ್ರಸಾದ್ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಅಗತ್ಯವಿರುವ ಎರಡು ಸ್ಥಳಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಸ್ಥಳ ಪರಿಶೀಲನೆಗಾಗಿ ಮಂಗಳೂರಿಗೆ ಭೇಟಿ ನೀಡುವಂತೆ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರು KSCA ಅಧ್ಯಕ್ಷರಿಗೆ ಮನವಿ ಮಾಡಿದ್ದಾರೆ.
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಗೊಂಡಲ್ಲಿ ಕರಾವಳಿ ಭಾಗದ ಕ್ರೀಡಾಪಟುಗಳಿಗೆ ಹಾಗೂ ಕ್ರಿಕೆಟ್ ಅಭಿಮಾನಿಗಳಿಗೆ ಹೆಚ್ಚಿನ ಅವಕಾಶಗಳು ದೊರೆಯಲಿದ್ದು, ನಗರದ ಕ್ರೀಡಾ ಮೂಲಸೌಕರ್ಯ ಹಾಗೂ ಪ್ರವಾಸೋದ್ಯಮಕ್ಕೂ ಮತ್ತಷ್ಟು ಉತ್ತೇಜನ ದೊರೆಯುವ ನಿರೀಕ್ಷೆ ಇದೆ.
ಚರ್ಚೆಯಲ್ಲಿ KSCA ಖಜಾಂಚಿ ಬಿ.ಎನ್. ಮಧುಕರ್, ಕಾರ್ಯಕಾರಿಣಿ ಸಮಿತಿ ಸದಸ್ಯ ಪರಿಣಿತ್, ಸದಸ್ಯ ಅನುಪ್ ಶ್ರೀಧರ್ ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.