ರಕ್ತದಾನ ಮಾಡಿ ಅಮೂಲ್ಯ ಜೀವ ಉಳಿಸಿ- ಡಿ.ಹೆಚ್.ಒ ಡಾ.ತಿಮ್ಮಯ್ಯ
ಮಂಗಳೂರು: ಪ್ರತಿಯೊಬ್ಬರೂ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲು ಮುಂದೆ ಬರಬೇಕು. ರಕ್ತದಾನವು ಅಮೂಲ್ಯ ಜೀವಗಳನ್ನು ಉಳಿಸುವ ಮಹತ್ವದ ಕಾರ್ಯವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಹೆಚ್.ಆರ್ ತಿಮ್ಮಯ್ಯ ಹೇಳಿದರು.
ಅವರು ಬುಧವಾರ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಪ್ರಾದೇಶಿಕ ರಕ್ತಪೂರಣ ಕೇಂದ್ರ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮತ್ತು ವೆನ್ಲಾಕ್ ಲೇಡಿಗೋಷನ್ ಮತ್ತು ಕೆಎಂಸಿ ಹಳೆ ವಿದ್ಯಾರ್ಥಿಗಳ ಸಂಘದ ಸಹಯೋಗದಲ್ಲಿ ವೆನ್ಲಾಕ್ ರಕ್ತಪೂರಣ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ ಮತ್ತು ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಕ್ತದಾನದಿಂದ ಮತ್ತೊಬ್ಬರ ಅಮೂಲ್ಯ ಜೀವವನ್ನು ಉಳಿಸಲು ಸಾಧ್ಯವಿದೆ. ಆದ್ದರಿಂದ ಪ್ರತಿಯೊಬ್ಬ ಆರೋಗ್ಯವಂತ ಅರ್ಹ ವ್ಯಕ್ತಿಯೂ ಯಾವುದೇ ತಪ್ಪು ಕಲ್ಪನೆಗಳಿಗೆ ಒಳಗಾಗದೆ, ವೈದ್ಯಕೀಯ ಮಾರ್ಗಸೂಚಿಗಳನ್ನು ಪಾಲಿಸಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲು ಮುಂದೆ ಬರಬೇಕು. ಪ್ರತಿಯೊಬ್ಬರೂ ರಕ್ತದಾನದ ಮಹತ್ವವನ್ನು ಅರಿತುಕೊಂಡು, ರಕ್ತದಾನ ಮಾಡುವ ಮೂಲಕ ರಕ್ತದ ಅವಶ್ಯಕತೆ ಇರುವವರಿಗೆ ನೆರವಾಗಬೇಕು ಎಂದು ಅವರು ಹೇಳಿದರು.
ಡೊನೇಟ್ ಬ್ಲಡ್, ನಾಟ್ ಆನ್ ರೋಡ್ ಎಂಬ ಸಂದೇಶದೊಂದಿಗೆ ಮಾತನಾಡಿದ ಅವರು, ರಸ್ತೆಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ಅಪಘಾತಕ್ಕೀಡಾಗಿ ರಕ್ತ ಹರಿಸುವ ಬದಲು, ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಮತ್ತೊಬ್ಬರಿಗೆ ಮರು ಜೀವ ನೀಡುವ ಕಾರ್ಯದಲ್ಲಿ ಕೈ ಜೋಡಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಲೇಡಿಗೋಷನ್ ಅಧೀಕ್ಷಕ ಡಾ.ದುರ್ಗಾಪ್ರಸಾದ್, ಲೇಡಿಗೋಷನ್ ಆರ್.ಎಂ.ಒ ಡಾ. ಜಗದೀಶ್ ಕೆ, ಡಾ. ಮಧುಸೂದನ್, ಡಾ.ಅಶ್ವತ್ ಮತ್ತಿತ್ತರರು ಇದ್ದರು. ಡಾ.ಅಣ್ಣಯ್ಯ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು.
ಇದೇ ಸಂದರ್ಭದಲ್ಲಿ ಸ್ವಯಂಪ್ರೇರಿತ ರಕ್ತದಾನ ಮಾಡುತ್ತಾ, ಅಮೂಲ್ಯ ಜೀವಗಳನ್ನು ಉಳಿಸುವಲ್ಲಿ ಮಹತ್ವದ ಕೊಡುಗೆ ನೀಡಿದ ರಕ್ತದಾನಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಬುಧವಾರ ದಕ್ಷಿಣ ಕನ್ನಡ ಜಿಲ್ಲಾದ್ಯಂತ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ಒಟ್ಟು 1300 ಯೂನಿಟ್ ರಕ್ತ ಸಂಗ್ರಹಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 13 ವಿವಿಧ ಸ್ಥಳಗಳಲ್ಲಿ ಇಂದು ರಕ್ತದಾನ ಶಿಬಿರ ನಡೆಸಲಾಗಿದ್ದು, ಎಜೆ ಆಸ್ಪತ್ರೆಯಲ್ಲಿ ಅತ್ಯಧಿಕ 253 ಯೂನಿಟ್ ರಕ್ತ ಸಂಗ್ರಹವಾಗಿದೆ.
