ಭಾರೀ ಮಳೆ ಹಿನ್ನಲೆ: ದಕ ಜಿಲ್ಲೆಯಲ್ಲಿ ನಾಳೆ (ಜು.18) ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Spread the love

ಭಾರೀ ಮಳೆ ಹಿನ್ನಲೆ: ದಕ ಜಿಲ್ಲೆಯಲ್ಲಿ ನಾಳೆ (ಜು.18) ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜುಲೈ 18, 2026ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ವಸತಿ ಶಾಲೆಗಳು, ಪದವಿ ಪೂರ್ವ ಹಾಗೂ ವಸತಿ ಪಿಯು ಕಾಲೇಜುಗಳಿಗೆ (12ನೇ ತರಗತಿಯವರೆಗೆ) ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಆದೇಶ ಹೊರಡಿಸಿದ್ದಾರೆ.

ಆದೇಶ ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ-2005ರ ಕಲಂ 51(ಬಿ) ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಜಿಲ್ಲಾಡಳಿತವು ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿತೀರ, ಸಮುದ್ರತೀರ ಹಾಗೂ ನೀರು ತುಂಬಿರುವ ತಗ್ಗು ಪ್ರದೇಶಗಳಿಗೆ ತೆರಳದಂತೆ ಸೂಚಿಸಿದ್ದು, ಮಕ್ಕಳನ್ನು ಕೆರೆ, ನದಿ ಹಾಗೂ ಸಮುದ್ರ ತೀರದ ಪ್ರದೇಶಗಳಿಗೆ ಬಿಡದಂತೆ ಪಾಲಕರಿಗೆ ಮನವಿ ಮಾಡಿದೆ.

ಇದೇ ವೇಳೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳುವಂತೆ ನಿರ್ದೇಶಿಸಲಾಗಿದೆ. ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸುವುದರ ಜೊತೆಗೆ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಲು ಸೂಚಿಸಲಾಗಿದೆ.

ಪ್ರತಿ ತಾಲೂಕಿನಲ್ಲೂ ಸಂಬಂಧಪಟ್ಟ ಇಲಾಖೆಗಳು ಕಾಳಜಿ ಕೇಂದ್ರಗಳನ್ನು ತೆರೆಯುವ ಮೂಲಕ ಸನ್ನದ್ಧ ಸ್ಥಿತಿಯಲ್ಲಿರಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ.

ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ತುರ್ತು ಸಮಸ್ಯೆಗಳಿದ್ದಲ್ಲಿ ಜಿಲ್ಲಾಡಳಿತದ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.


Spread the love
Subscribe
Notify of

0 Comments