Home Mangalorean News Kannada News ಭಾರೀ ಮಳೆ ಹಿನ್ನೆಲೆ: ನಾಳೆ (ಜು.25) ದಕ್ಷಿಣ ಕನ್ನಡ ಜಿಲ್ಲೆಯ  ಶಾಲೆ, ಪಿಯು, ಐಟಿಐ ಹಾಗೂ...

ಭಾರೀ ಮಳೆ ಹಿನ್ನೆಲೆ: ನಾಳೆ (ಜು.25) ದಕ್ಷಿಣ ಕನ್ನಡ ಜಿಲ್ಲೆಯ  ಶಾಲೆ, ಪಿಯು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ರಜೆ ಘೋಷಣೆ

Spread the love

ಭಾರೀ ಮಳೆ ಹಿನ್ನೆಲೆ: ನಾಳೆ (ಜು.25) ದಕ್ಷಿಣ ಕನ್ನಡ ಜಿಲ್ಲೆಯ  ಶಾಲೆ, ಪಿಯು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ನೀಡಿರುವ ಹವಾಮಾನ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 25ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು (12ನೇ ತರಗತಿ), ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಈ ಕುರಿತು ಆದೇಶ ಹೊರಡಿಸಿದ್ದು, ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005ರ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಪೋಷಕರು ತಮ್ಮ ಮಕ್ಕಳನ್ನು ನೀರು ನಿಂತಿರುವ ತಗ್ಗು ಪ್ರದೇಶಗಳು, ಕೆರೆ, ನದಿ ಹಾಗೂ ಸಮುದ್ರ ತೀರಗಳಿಗೆ ತೆರಳದಂತೆ ವಿಶೇಷ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸುವುದರ ಜೊತೆಗೆ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ಸೂಚಿಸಲಾಗಿದೆ.

ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿತೀರ, ಸಮುದ್ರತೀರ ಸೇರಿದಂತೆ ಅಪಾಯದ ಪ್ರದೇಶಗಳಿಗೆ ತೆರಳದಂತೆ ಮನವಿ ಮಾಡಲಾಗಿದೆ. ಪ್ರತಿ ತಾಲೂಕಿನಲ್ಲೂ ಸಂಬಂಧಿತ ಇಲಾಖೆಗಳು ಕಾಳಜಿ ಕೇಂದ್ರಗಳನ್ನು ತೆರೆಯುವ ಮೂಲಕ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ನಿರ್ದೇಶಿಸಲಾಗಿದೆ.

ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರು ಜಿಲ್ಲಾಡಳಿತದ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಿ ನೆರವು ಪಡೆಯುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.


Spread the love

Exit mobile version