ಪರಿಪೂರ್ಣತೆಯ ಶಿಕ್ಷಣ ವಿದ್ಯಾರ್ಥಿಗಳ ಭವಿಷ್ಯದ ಸಾಧನೆಗೆ ಅಡಿಪಾಯ : ಡಾ. ಎಂ. ಮೋಹನ್ ಆಳ್ವ
ಉಡುಪಿ: ಆಧುನಿಕ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಪಠ್ಯಕ್ರಮದ ಶಿಕ್ಷಣತೆಗೆ ಸೀಮಿತವಾಗಿರದೇ ಪರಿಪೂರ್ಣತೆಯ ಶಿಕ್ಷಣವೇ ಭವಿಷ್ಯದ ವಿದ್ಯಾರ್ಥಿಗಳ ಸಾಧನೆಗೆ ಅಡಿಪಾಯವಾಗಿದ್ದು, ಪ್ರತಿಭಾ ಪುರಸ್ಕಾರದ ಮೂಲಕ ಪ್ರೇರಣೆ ಪಡೆದು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ದೇಶಕ್ಕೆ ಆಸ್ತಿಯಾಗಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ಹೇಳಿದರು.
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಉಡುಪಿಯ ಪುರಭವನದಲ್ಲಿ ನಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಡೈರಿ ಬಿಡುಗಡೆ ಹಾಗೂ ಸಹಕಾರ ಕ್ಷೇತ್ರದ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿದ ನಾಡೋಜ ಡಾ. ಜಿ. ಶಂಕರ್ ಮಾತನಾಡಿ ಮಹಾಲಕ್ಷ್ಮೀ ಬ್ಯಾಂಕ್ ಯಶ್ ಪಾಲ್ ಸುವರ್ಣ ಅವರ ಅಧ್ಯಕ್ಷತೆಯಲ್ಲಿ ನಿರಂತರ ಪ್ರಗತಿ ಸಾಧಿಸುವ ಜೊತೆಗೆ ಲಾಭಾಂಶದಲ್ಲಿ ಬಹುದೊಡ್ಡ ಮೊತ್ತವನ್ನು ಶಿಕ್ಷಣಕ್ಕೆ ಪ್ರೋತ್ಸಾಹ ಹಾಗೂ ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸಿ ಮಾದರಿ ಸಹಕಾರಿ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಮುಂದಿನ ದಿನಗಳಲ್ಲಿ ಮಹಾನಗರಿ ಮುಂಬೈನಲ್ಲಿಯೂ ವ್ಯವಹಾರ ವಿಸ್ತರಿಸಲು ಮುಂದಾಗಿರುವುದು ಅಭಿನಂದನಾರ್ಹ ಎಂದರು.
ಮಹಾಲಕ್ಷ್ಮೀ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ಗೀತಾನಂದ ಫೌಂಡೇಶನ್ ಅಧ್ಯಕ್ಷರಾದ ಆನಂದ ಸಿ. ಕುಂದರ್ ನೂತನ ಡೈರಿ ಬಿಡುಗಡೆ ಮಾಡಿ ಶಿಕ್ಷಣದ ಜೊತೆ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಸಮಾರಂಭದಲ್ಲಿ ಉಪಸ್ಥಿತರಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಶುಭ ಹಾರೈಸಿದರು.
ಈ ಸಾಲಿನ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಾದ ಮಲ್ಪೆ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಸತೀಶ್ ಕುಂದರ್, ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಜಯರಾಮ ಶೆಟ್ಟಿ, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷರಾದ ಶ್ರೀ ವೈ ಸುಧೀರ್ ಕುಮಾರ್, ಉಡುಪಿ ಜಿಲ್ಲೆಯ ಉತ್ತಮ ಮಹಿಳಾ ಸಹಕಾರಿ ಸಂಘ ಪ್ರಶಸ್ತಿ ಪುರಸ್ಕೃತ ಮೀನು ಮಾರಾಟಗಾರರ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಬೇಬಿ ಎಚ್. ಸಾಲ್ಯಾನ್, ಕ್ರೀಡಾ ಸಾಧಕಿ ಅಪರ್ಣಾ ಎಸ್. ಸಾಲ್ಯಾನ್ ರವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಆಯೋಜಿಸಿದ್ದ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಪ್ರಶಸ್ತಿಗಳನ್ನು ವಿತರಿಸಲಾಯಿತು.
ಸಮಾರಂಭದಲ್ಲಿ ಉದ್ಯಮಿ ಆನಂದ ಪಿ. ಸುವರ್ಣ, ಬ್ಯಾಂಕಿನ ಉಪಾಧ್ಯಕ್ಷರಾದ ವಾಸುದೇವ ಸಾಲ್ಯಾನ್, ವ್ಯವಸ್ಥಾಪನ ನಿರ್ದೇಶಕರಾದ ಶರತ್ ಕುಮಾರ್ ಶೆಟ್ಟಿ ಎನ್., ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಶ್ರೀಮತಿ ಶಾರಿಕಾ ಕಿರಣ್, ಆನಂದ ಸೆಲ್ವಂ ಉಪಸ್ಥಿತರಿದ್ದರು.
ಶಿಕ್ಷಕ ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ ಹಾಗೂ ಬ್ಯಾಂಕಿನ ಸಿಬ್ಬಂದಿ ಶ್ರೀಮತಿ ವಿಜೇತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.













